ಬೆಂಗಳೂರು: ನಗರದ ಪೂರ್ವ ತಾಲೂಕಿನ ವರ್ತೂರು ಹೋಬಳಿಯ ಗುಂಜೂರು ಗ್ರಾಮದ ಅರಣ್ಯ ಭೂಮಿಯಲ್ಲಿ ಕ್ರೀಡಾಂಗಣ ನಿರ್ಮಿಸುತ್ತಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿರುವ ಹೈಕೋರ್ಟ್, ಕಾಮಗಾರಿಗೆ ಮಧ್ಯಂತರ ತಡೆ ನೀಡಿದೆ.
ಕಾಮಗಾರಿ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಟಿ.ನರಸಿಂಹಮೂರ್ತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಸ್. ಉಮಾಪತಿ ಅವರು ವಾದಿಸಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ವರದಿ ಪ್ರಕಾರ ಗುಂಜೂರು ಗ್ರಾಮದ ಸರ್ವೇ ನಂಬರ್ 104ರಲ್ಲಿನ 27 ಎಕರೆ 8 ಗುಂಟೆ ಜಾಗ ಡೀಮ್ಡ್ ಅರಣ್ಯ ಪ್ರದೇಶವಾಗಿದೆ. ಆದರೆ, ಕಂದಾಯ ಇಲಾಖೆ ಪ್ರಭಾವಿ ರಾಜಕಾರಣಿಗಳ ಒತ್ತಡಕ್ಕೆ ಮಣಿದು ದಾಖಲೆಗಳನ್ನು ತಿರುಚಿದೆ. ಬಳಿಕ ಈ ಜಾಗವನ್ನು ಕಂದಾಯ ಭೂಮಿ ಎಂದು ಪರಿಗಣಿಸಿ ಕ್ರೀಡಾಂಗಣ ಹಾಗೂ ಕ್ರೀಡಾ ಸಂಕೀರ್ಣ ನಿರ್ಮಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಅನುಮತಿ ನೀಡಿದೆ.
ಅಲ್ಲದೆ, ಕ್ರೀಡಾಂಗಣ ನಿರ್ಮಾಣಕ್ಕೆ ಅರಣ್ಯ ಇಲಾಖೆಯಿಂದ ಅನುಮತಿ ಪಡೆದಿಲ್ಲ. ಅರಣ್ಯ ಸಂರಕ್ಷಣೆ ಮಾಡುವಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಆದ್ದರಿಂದ ಕಾಮಗಾರಿ ನಿಲ್ಲಿಸುವಂತೆ ಹಾಗೂ ಅರಣ್ಯ ಭೂಮಿ ರಕ್ಷಣೆ ಮಾಡುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು. ಕ್ರೀಡಾಂಗಣ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಿದ ಕಂದಾಯ ಇಲಾಖೆ ಆದೇಶ ರದ್ದುಪಡಿಸಬೇಕು ಎಂದು ಮನವಿ ಮಾಡಿದರು.
ವಕೀಲ ಎಸ್.ಉಮಾಪತಿ ಅವರ ವಾದ ಆಲಿಸಿದ ಪೀಠ, ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಬೆಂಗಳೂರು ನಗರ ಜಿಲ್ಲಾಧಿಕಾರಿ, ಅರಣ್ಯ ಇಲಾಖೆ ಮುಖ್ಯ ಸಂರಕ್ಷಣಾಧಿಕಾರಿ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ನೋಟಿಸ್ ಜಾರಿ ಮಾಡಿತು. ಹಾಗೆಯೇ ಡಿಸಿಎಫ್ ವರದಿ ಸಲ್ಲಿಸುವವರೆಗೂ ಯಾವುದೇ ಕಾಮಗಾರಿ ಮುಂದುವರಿಸದಂತೆ ಮಧ್ಯಂತರ ತಡೆ ನೀಡಿ, ವಿಚಾರಣೆಯನ್ನು ನವೆಂಬರ್ 23ಕ್ಕೆ ಮುಂದೂಡಿತು.