ಮಂಗಳೂರು : ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಹಿನ್ನೆಲೆ ನಗರದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಫೆ.14ರ ಬೆಳಗ್ಗೆ 6 ರಿಂದ 19ರ ಸಂಜೆ 6ರವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಶಾಲಾ-ಕಾಲೇಜುಗಳ ಸುತ್ತಮುತ್ತಲಿನ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ.
ಅದರಂತೆ ನಿರ್ಬಂಧಕಾಜ್ಞೆ ಜಾರಿಯಲ್ಲಿರುವ ಸಮಯದಲ್ಲಿ ಸಾರ್ವಜನಿಕವಾಗಿ ಯಾವುದೇ ಕೂಗು, ಪದ್ಯಗಳನ್ನು ಹಾಡುವುದು, ಚೇಷ್ಟೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಹಾಗೂ ಚಿತ್ರಗಳ ಮೂಲಕ ಪ್ರದರ್ಶನ ಪ್ರಸಾರ ಮಾಡುವುದು, ಪ್ರಕಟಣಾ ಪತ್ರಿಕೆಗಳ ಇತರ ಯಾವುದೇ ವಸ್ತುಗಳ ಪ್ರದರ್ಶನ, ಭಿತ್ತಿಪತ್ರಗಳನ್ನು ಅಂಟಿಸುವಂತಿಲ್ಲ.
ಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತಾ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗಲು ಪ್ರೇರೇಪಿಸುವ ಕಾರ್ಯಗಳನ್ನು ನಿಷೇಧಿಸಲಾಗಿದೆ. ಐವರು ಹಾಗೂ ಅದಕ್ಕಿಂತ ಹೆಚ್ಚು ಜನರು ಒಟ್ಟಾಗಿ ಸೇರುವುದನ್ನು ನಿಷೇಧಿಸಲಾಗಿದೆ.
ಶಸ್ತ್ರಾಸ್ತ್ರಗಳು, ದೋಣಿ, ಕತ್ತಿ, ಈಟಿ, ಗದೆ, ಬಂದೂಕು, ಚಾಕು, ಕೋಲು ಮುಂತಾದ ಮಾರಕಾಯುಧ ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.
ಪಟಾಕಿಗಳನ್ನು ಸಿಡಿಸುವುದು, ಯಾವುದೇ ಹಾನಿಕಾರಕ ಪದಾರ್ಥ ಅಥವಾ ಸ್ಫೋಟಕಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿಯ ಅಥವಾ ಅವರ ಮೃತದೇಹ ಅಥವಾ ಆಕೃತಿಗಳ ಅಥವಾ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಲಾಗಿದೆ.
ಕಲ್ಲು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಲಾಗಿದೆ.
ಸರ್ಕಾರಿ ಸಂಸ್ಥೆಗಳು, ಸಂಘಟನೆಗಳು ಹಾಗೂ ಕಾರ್ಯನಿರತ ಅಧಿಕಾರಿ ಸಿಬ್ಬಂದಿ ವಿರುದ್ಧ ನಿಂದಿಸುವಂತಹ ಅವಹೇಳನಕಾರಿಯಾದಂತಹ ಯಾವುದೇ ಘೋಷಣೆಗಳು, ಭಾಷಣಗಳು, ಪ್ರಕಟಣೆಗಳು ಅವಾಚ್ಯ ಶಬ್ದಗಳಿಂದ ಕೂಡಿದ ಪ್ರಚೋದನಾಕಾರಿ ಭಾಷಣ, ಗಾಯನ ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಿದೆ. ಜೊತೆಗೆ ಯಾವುದೇ ಜಾತಿ, ಧರ್ಮ, ಕೋಮು ಅಥವಾ ಸಾರ್ವಜನಿಕ ನೈಜಕತೆಗೆ ಭಾದಕ ಉಂಟು ಮಾಡಬಹುದಾದಂತಹ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.
ಈ ನಿರ್ಬಂಧಕಾಜ್ಞೆಯು ಜಾರಿಯಲ್ಲಿರುವ ಪ್ರದೇಶದಲ್ಲಿ ಸರ್ಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ, ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಓದಿ: ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ರೂ. ಬೆಲೆಯ ಬೆಳೆ ಹಾನಿ