ಬೆಂಗಳೂರು: ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಂಡು ಶ್ರೀರಾಮ ಮಂದಿರ ಶಿಲಾನ್ಯಾಸ ಹಾಗೂ ಭೂಮಿ ಪೂಜೆಯ ಸಂಭ್ರಮಾಚರಣೆ ಆಚರಿಸಿದ ಎಲ್ಲಾ ಸಂಘಟನೆಗಳ ಮುಖಂಡರು, ಸದಸ್ಯರು ಹಾಗೂ ನಾಡಿನ ಜನತೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಧನ್ಯವಾದ ತಿಳಿಸಿದ್ದಾರೆ.
ರಾಮ ಜನ್ಮ ಭೂಮಿಯಲ್ಲಿ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕನ್ನಡ ನಾಡಿನ ಜನತೆ ಪರವಾಗಿ ಅಭಿನಂದನೆಗಳು. 500 ವರ್ಷಗಳ ಇತಿಹಾಸವನ್ನು ಪುನಃ ನಿರ್ಮಿಸುವಂತಹ ಮಹತ್ವದ ಕಾರ್ಯ ನಿನ್ನೆ ನಡೆದಿದೆ. ಸುದೀರ್ಘವಾದ ಹೋರಾಟ ಮತ್ತು ಹಲವು ಜನರ ಪ್ರಾಣ ತ್ಯಾಗಕ್ಕೆ ಸಿಕ್ಕ ಪ್ರತಿಫಲವಾಗಿದೆ. ಪ್ರಾಣತ್ಯಾಗ ಮಾಡಿದ ಹೋರಾಟಗಾರರಿಗೆ ನಮನಗಳನ್ನು ಸಲ್ಲಿಸುತ್ತೇನೆ ಎಂದು ಗೃಹ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಮ ಜನ್ಮ ಭೂಮಿಯ ಹೋರಾಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಂಚೂಣಿಯಲ್ಲಿ ಇದ್ದದ್ದು ನಮಗೆ ಹೆಮ್ಮೆಯ ವಿಷಯ. ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿ, ಶತಮಾನದ ವಿವಾದಕ್ಕೆ ತೆರೆ ಎಳೆದಿರುವುದು ಶ್ಲಾಘನೀಯ. ಈ ತೀರ್ಪು ದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದರು.
ಇದು ದೇಶದಲ್ಲಿ ಪ್ರಜಾಪ್ರಭುತ್ವ ಆಸೆಯಂತೆ ಸಂವಿಧಾನದ ಅಡಿಯಲ್ಲಿ ಕಾನೂನಾತ್ಮಕ ಆಡಳಿತ ಗಟ್ಟಿಯಾಗಿದೆ ಎಂದು ತೋರಿಸಿಕೊಟ್ಟಿದೆ. ಈ ಸಮಾರಂಭಕ್ಕೆ ಸಹಕಾರ ನೀಡಿದ ಎಲ್ಲಾ ವರ್ಗದ ಜನರಿಗೆ ಕೃತಜ್ಞತೆಗಳನ್ನು ಹೇಳುತ್ತೇನೆ. ಗೃಹ ಇಲಾಖೆ ಎಲ್ಲಾ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ತಮ್ಮ ಸೇವಾ ನಿಷ್ಠೆಯನ್ನು ಪ್ರದರ್ಶಿಸಿದ್ದಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.