ಬೆಂಗಳೂರು : ಇತ್ತೀಚೆಗೆ ರಾಜ್ಯ ಹೈಕೋರ್ಟ್‌ನಿಂದ ವರ್ಗಾವಣೆಯಾಗಿ ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ(Chief Justice of Gujarat High Court) ಆಗಿ ಕಾರ್ಯ ನಿರ್ವಹಿಸುತ್ತಿರುವ ನ್ಯಾ. ಅರವಿಂದ್ ಕುಮಾರ್(Arvind Kumar) ಅವರಿಗೆ ಇಂದು ಬೆಂಗಳೂರು ವಕೀಲರ ಸಂಘದ ವತಿಯಿಂದ ಸನ್ಮಾನ ಮಾಡಲಾಯಿತು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ (Banquet Hall of vidhana soudha)ನಲ್ಲಿ ಬೆಂಗಳೂರು ವಕೀಲರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಘದ ಪರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ( Chief Justice Rituraj awashti), ಹೈಕೋರ್ಟ್‌ನ ಎಲ್ಲ ನ್ಯಾಯಮೂರ್ತಿಗಳು, ರಾಜ್ಯ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್, ಪ್ರಧಾನ ಕಾರ್ಯದರ್ಶಿ ಎ.ಎನ್. ಗಂಗಾಧರಯ್ಯ, ಖಜಾಂಚಿ ಶಿವಮೂರ್ತಿ ಸೇರಿದಂತೆ ಹಲವು ವಕೀಲರು ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಎಎಬಿ ಅಧ್ಯಕ್ಷ ಎ.ಪಿ ರಂಗನಾಥ್, ಗುಜರಾತ್ ಸಿಜೆ ಅರವಿಂದ್ ಕುಮಾರ್ ಅವರ ಸರಳತೆಯನ್ನು ರಾಜ್ಯ ನ್ಯಾಯಾಂಗಕ್ಕೆ ಸಲ್ಲಿಸಿರುವ ಸೇವೆಯನ್ನು ಶ್ಲಾಘಿಸಿದರು.
ಕೋವಿಡ್ ಸಂದರ್ಭದಲ್ಲಿ ರಾಜ್ಯದಲ್ಲಿ ಸೋಂಕು ನಿರ್ವಹಣೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಹಲವು ನಿರ್ದೇಶನಗಳನ್ನು ನೀಡಿದ್ದರು. ವಕೀಲ ಸಮುದಾಯಕ್ಕೆ ವಿಮೆ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಿ ಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ವಕೀಲ ಸಮುದಾಯದೊಂದಿಗೆ ಅತ್ಯುತ್ತಮ ಒಡನಾಟ ಹೊಂದಿದ್ದರು. ಇವರಿಗೆ ಸುಪ್ರೀಂಕೋರ್ಟ್‌ನಲ್ಲಿಯೂ ಸೇವೆ ಸಲ್ಲಿಸುವ ಅವಕಾಶ ಸಿಗಲಿ ಎಂದು ಹಾರೈಸಿದರು.
ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ (Advocate General Prabhu Linga) ಮಾತನಾಡಿ, ನ್ಯಾಯಾಲಯಗಳ ಆಡಳಿತಾತ್ಮಕ ವಿಚಾರಗಳಲ್ಲಿ ಪ್ರಕರಣ ನಿರ್ವಹಣೆಯಲ್ಲಿ ಸುದೀರ್ಘ ಅನುಭವ ಹೊಂದಿದ್ದಾರೆ. ಗುಜರಾತ್ ಹೈಕೋರ್ಟ್‌ನಲ್ಲಿಯೂ ಅತ್ಯುತ್ತಮ ಸೇವೆ ಸಲ್ಲಿಸಲಿದ್ದಾರೆ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Chief Minister Basavaraja Bommai) ಮಾತನಾಡಿ, ನ್ಯಾಯಮೂರ್ತಿ ಅರವಿಂದ್ ಕುಮಾರ್ (Justice Arvind Kumar) ಗುಜರಾತ್ ಸಿಜೆ ಆಗಿ ಗುಜರಾತ್‌ಗೆ ಹೋಗಿರುವುದರಿಂದ ರಾಜ್ಯಕ್ಕೆ ನಷ್ಟವಾಗಿದೆ. ಆದರೆ, ಅವರು ಸುಪ್ರೀಂಕೋರ್ಟ್‌ಗೆ ಹೋದರೆ ಇಡೀ ದೇಶಕ್ಕೆ ಅನುಕೂಲಗಲಿದೆ ಎಂದರು.
ಅವರು ಬರೀ ಜಸ್ಟೀಸ್ ಅಷ್ಟೇ ಅಲ್ಲ, ಸ್ಟೇಟ್ಸ್‌ಮನ್ ಜಸ್ಟೀಸ್ ಅರವಿಂದ್ ಕುಮಾರ್ ಎಂದು ಬಣ್ಣಿಸಿದರು. ಅಲ್ಲದೇ, ಮುಖ್ಯಮಂತ್ರಿಯಾಗಿ ರಾಜ್ಯದ ಕಟ್ಟಕಡೆಯ ವ್ಯಕ್ತಿಯ ಬಗ್ಗೆಯೂ ಯೋಚಿಸಬೇಕಾಗುತ್ತದೆ. ಅದೇ ರೀತಿ ಸಿಜೆ ಆಗಿ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರೀಗ ಹೆಚ್ಚಿನ ಜವಾಬ್ದಾರಿ ಹೊತ್ತಿದ್ದಾರೆ. ಅವರ ಸೇವೆ ಅಗತ್ಯ ಬಿದ್ದಾಗ ರಾಜ್ಯಕ್ಕೂ ಸಿಗಬೇಕು. ಈ ನಿಟ್ಟಿನಲ್ಲಿ ನ್ಯಾಯಮೂರ್ತಿಗಳು ರಾಜ್ಯವನ್ನು ಮರೆಯಬಾರದು ಎಂದು ಮನವಿ ಮಾಡಿದರು.
ಸಿಜೆ ರಿತುರಾಜ್ ಅವಸ್ಥಿ ಮಾತನಾಡಿ, ರಾಜಸ್ಥಾನದಲ್ಲಿ ವಿವಾಹ ಕಾರ್ಯಕ್ರಮವೊಂದರಲ್ಲಿ ಪರಸ್ಪರ ಭೇಟಿಯಾಗಿದ್ದೆವು. ಆಗಲೇ ಅವರ ಸರಳತೆ, ಸ್ನೇಹಮಯ ಗುಣ ಇಷ್ಟವಾಗಿತ್ತು. ಅಂದಿನಿಂದ ಇಂದಿನವರೆಗೂ ನಮ್ಮ ಸ್ನೇಹ ಮುಂದುವರಿದಿದೆ ಎಂದರು.