ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ನೀಡಲು ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ಯಾನರ್ ಖರೀದಿಸಬೇಕೆಂದು ರಾಜ್ಯ ಸರ್ಕಾರ ನೀಡಿದ್ದ ಆದೇಶವನ್ನು ವಾಪಸ್ ಪಡೆದಿದೆ.
ಸಮಾಜ ಕಲ್ಯಾಣ ಇಲಾಖೆ ಸರ್ಕಾರಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ಯಾನರ್ ಖರೀದಿಸಲು ಆದೇಶ ನೀಡಲಾಗಿತ್ತು. ಆದರೆ ಇದರಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ, ಸೂಕ್ತ ತನಿಖೆ ನಡೆಸಬೇಕು ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಆಗ್ರಹಿಸಿದ್ದರು. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರನ್ನು ಭೇಟಿಯಾಗಿ ಇಂದು ಮನವಿ ಕೂಡ ಮಾಡಲಾಗಿತ್ತು. ಬಳಿಕ ಸರ್ಕಾರ ಈ ಪ್ರಸ್ತಾವನೆಯನ್ನು ಮರು ಪರಿಶೀಲಿಸಬೇಕಾಗಿದೆ. ಹಾಗಾಗಿ ಆದೇಶವನ್ನು ಹಿಂಪಡೆಯಲಾಗಿದೆ. ಅಲ್ಲದೇ ಈ ಆದೇಶದ ಮೇಲೆ ಯಾವುದೇ ಕ್ರಮವನ್ನು ತೆಗೆದುಕೊಳ್ಳಬಾರದೆಂದು ಸೂಚಿಸಿದೆ.
ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ಯಾನರ್ಗಳನ್ನು ವಿತರಿಸುವ ಸಲುವಾಗಿ 500ಎಂ.ಎಲ್. ಬಾಟಲ್ ಸ್ಯಾನಿಟೈಸರ್‌ಗೆ ತಲಾ ರೂ. 600ರಂತೆ 1867 ವಿದ್ಯಾರ್ಥಿನಿಲಯಗಳಿಗೆ ಹಂಚಲು 44,80,800 ರೂ. ಆಗಲಿದೆ ಎಂದು ಅಂದಾಜಿಸಲಾಗಿತ್ತು. ಥರ್ಮಲ್ ಸ್ಕ್ಯಾನರ್ ಖರೀದಿಗಾಗಿ ಅಂದಾಜು ಮೊತ್ತ ತಲಾ ರೂ. 9000ದಂತೆ 1867 ವಿದ್ಯಾರ್ಥಿನಿಲಯಗಳಿಗೆ ನೀಡಲು ರೂ. 1,68,03,000 ವೆಚ್ಚವಾಗಲಿದೆ.