ಆನೇಕಲ್ (ಬೆಂಗಳೂರು) : ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಶನಿವಾರ ನಡೆದ ಅಗ್ನಿ ಅವಘಡ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪಟಾಕಿ ದುರಂತ ಪ್ರಕರಣವನ್ನು ಸಿಐಡಿಗೆ ವಹಿಸುವುದಾಗಿ ಎಂದು ಹೇಳಿದರು.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ಅವಘಡ ಪ್ರಕರಣದಲ್ಲಿ ಒಟ್ಟು 14 ಮಂದಿ ಸಾವನ್ನಪ್ಪಿದ್ದು, 7 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು. ಸಿಐಡಿಯು ಘಟನೆ ಹಿಂದಿರುವ ಕಾರಣ ಮತ್ತು ಆರೋಪಿಗಳ ವಿರುದ್ಧ ತನಿಖೆ ನಡೆಸಲಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ. ಮೃತರ ಗುರುತು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ಅಕ್ಟೋಬರ್ 7ರಂದು ಮಧ್ಯಾಹ್ನ 3.15 ರಿಂದ 3.30ರ ವೇಳೆ ಬೆಂಕಿ ಅನಾಹುತ ನಡೆದಿದೆ. ಇದು ಅತ್ಯಂತ ದುರದೃಷ್ಟಕರ ಘಟನೆ. ರಾಮುಸ್ವಾಮಿರೆಡ್ಡಿ ಎಂಬುವರು ಪರವಾನಗಿ ಪಡೆದು ಪಟಾಕಿ ಮಾರಾಟದ ವ್ಯವಹಾರ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ತಮಿಳುನಾಡಿನಿಂದ ಟ್ರಕ್ ಗಳಲ್ಲಿ ಪಟಾಕಿಗಳು ಬಂದಿದ್ದು, ಬೆಂಕಿ ಹೇಗೆ ಪಟಾಕಿಗೆ ತಗುಲಿತು ಎನ್ನುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಅಧಿಕಾರಿಗಳು ಇಲ್ಲಿ ಪರಿಶೀಲಿಸಿದ ಮೇಲೆ, ಸ್ಫೋಟಕಗಳ ಮಾರಾಟ ಮಾಡುವ ಗೋದಾಮಿನಲ್ಲಿ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡಿರಲಿಲ್ಲ ಎಂದು ಕಂಡುಬಂದಿದೆ.
ಗೋದಾಮಿನ ಸ್ಥಳ ಬಹಳ ಕಿರಿದಾಗಿದ್ದು, ಇದರಲ್ಲಿ 14 ಜನರು ಮೃತಪಟ್ಟಿದ್ದಾರೆ. ಎಲ್ಲರೂ ತಮಿಳುನಾಡಿನ ಕೃಷ್ಣಗಿರಿ, ಧರ್ಮಪುರಿಯವರು. ಅವರಲ್ಲಿ ಬಹುತೇಕರು ವಿದ್ಯಾರ್ಥಿಗಳು. ರಜಾ ಸಮಯದಲ್ಲಿ ಓದಿಗಾಗಿ ಹಣ ಸಂಪಾದನೆಗಾಗಿ ಬಂದವರು. ಒಬ್ಬ ಮ್ಯಾನೇಜರನ್ನು ಹೊರತುಪಡಿಸಿ ಯಾರೂ ಖಾಯಂ ನೌಕರರಿಲ್ಲ. ಸ್ಫೋಟಕಗಳಿಗೆ ಅಗತ್ಯವಾದ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಗೋದಾಮು ಅಧಿಕೃತವೋ ಅಲ್ಲವೋ ಎಂಬುದನ್ನು ಪರಿಶೀಲಿಸಬೇಕು ಎಂದು ಹೇಳಿದರು.
ಘಟನೆಯ ತನಿಖೆ ಕೈಗೊಂಡು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ, ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರೆಲ್ಲರ ಕುಟುಂಬಸ್ಥರಿಗೆ ನೋವನ್ನು ಭರಿಸುವ ಶಕ್ತಿ ಭಗವಂತ ನೀಡಲಿ. ಮತ್ತೆ ಇಂತಹ ದುರ್ಘಟನೆಗಳು ಮರುಕಳಿಸದಿರಲಿ ಎಂದು ಪ್ರಾರ್ಥಿಸುತ್ತೇನೆ. ಈ ಸಂಬಂಧ ರಾಮುಸ್ವಾಮಿರೆಡ್ಡಿ, ನವೀನ್, ಅನಿಲ್ ರೆಡ್ಡಿ ಎಂಬುವರನ್ನು ಬಂಧಿಸಲಾಗಿದೆ. ಐಪಿಸಿ ಸೆಕ್ಷನ್ 285, 286, 337, 338, 437, 304 ಎಫ್ ಐ.ಆರ್ ಕೂಡ ದಾಖಲಾಗಿದೆ. ಪ್ರಕರಣದ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, ಇದೊಂದು ಘೋರ ಘಟನೆ. ಘಟನೆ ಸಂಬಂಧ ಇನ್ನೆರಡು ಮೂರು ದಿನಗಳಲ್ಲಿ ಸೂಕ್ತ ಕ್ರಮಕೈಗೊಳ್ಳುತ್ತೇವೆ. ಈಗಾಗಲೇ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದೇವೆ. ಮತ್ತು ಗಾಯಾಳುಗಳ ಆಸ್ಪತ್ರೆ ವೆಚ್ಚವನ್ನು ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಬಳಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡು ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ವೇಳೆ ಗಾಯಾಳುಗಳ ಸಂಬಂಧಿಕರಿಗೆ ಧೈರ್ಯ ತುಂಬಿದರು. ಬಳಿಕ ವೈದ್ಯರ ತಂಡದ ಜೊತೆ ಚರ್ಚೆ ನಡೆಸಿದ ಸಿಎಂ ಗಾಯಾಳುಗಳಿಗೆ ಅಗತ್ಯ ಇರುವ ಎಲ್ಲಾ ಚಿಕಿತ್ಸಾ ಸವಲತ್ತುಗಳನ್ನು ಒದಗಿಸುವಂತೆ ಸೂಚನೆ ನೀಡಿದರು.
ಇದನ್ನೂ ಓದಿ : ಅತ್ತಿಬೆಲೆ ಪಟಾಕಿ ದುರಂತ: ಎಫ್ಐಆರ್ ದಾಖಲು, ಅಂಗಡಿ ಮಾಲೀಕ - ಪುತ್ರನ ಬಂಧನ - ಡಿಜಿಪಿ ಅಲೋಕ್ ಮೋಹನ್ ಮಾಹಿತಿ