ಬೆಂಗಳೂರು : ನಾನು ಉಪಚುನಾವಣಾ ಕಣದಿಂದ ಹಿಂದೆ ಸರಿಯುತ್ತಿದ್ದೇನೆಂಬ ಸುಳ್ಳು ವದಂತಿಗಳು ಹರಡುತ್ತಿವೆ. ನಾನು ಚುನಾವಣೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ. ಗಿರೀಶ್ ನಾಶಿ ಸ್ಪಷ್ಟಪಡಿಸಿದ್ದಾರೆ.
ಜೆಡಿಎಸ್ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಲುವ ಭೀತಿಯಿಂದ ಬಿಜೆಪಿಯವರು ಇಂತಹ ಸುಳ್ಳು ವದಂತಿಗಳನ್ನು ಹರಡಿಸುತ್ತಿದ್ದಾರೆ. ಉಪಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ಮಹಾನಗರ ಪಾಲಿಕೆ ಮಾಜಿ ಉಪಮೇಯರ್ ಭದ್ರೇಗೌಡ ಮಾತನಾಡಿ, ಗಿರೀಶ್ ನಾಶಿ ಅವರಿಗೆ ಕ್ಷೇತ್ರದಲ್ಲಿ ಜೆಡಿಎಸ್ ಮುಖಂಡರು ಸಹಕಾರ ನೀಡುತ್ತಿಲ್ಲ. ಹಾಗಾಗಿ, ನಾಶಿ ಅವರು ಚುನಾವಣಾ ಕಣದಿಂದ ಹಿಂದೆ ಸರಿಯಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಇದು ಸುಳ್ಳು. ನಾನೂ ಒಳಗೊಂಡಂತೆ ಕ್ಷೇತ್ರದ ಏಳು ವಾರ್ಡ್ ನ ಮುಖಂಡರು ಪ್ರಚಾರದಲ್ಲಿ ತೊಡಗಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ ಮಾತನಾಡಿ, ಬಸವೇಶ್ವರನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸೋಮಶೇಖರ್ ಅವರನ್ನು ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದೇವೆ. ಆದರೆ, ವರ್ಗಾವಣೆಗಿಂತ ಅವರನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿದರು. ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ಕೊಟ್ಟಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದಾರೆ, ಬಿಜೆಪಿ ಏಜೆಂಟ್ ಆಗಿ ಇನ್ಸ್ಪೆಕ್ಟರ್ ಸೋಮಶೇಖರ್ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.