ಬೆಂಗಳೂರು: ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಐಎಫ್ಎಸ್ ಅಧಿಕಾರಿವೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಪರ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವತಾರ್ ಸಿಂಗ್ ಆತ್ಮಹತ್ಯೆಗೆ ಶರಣಾದವರು. ಒಂದು ತಿಂಗಳ ಹಿಂದೆಯಷ್ಟೇ ಬೆಂಗಳೂರಿನ ಅರಣ್ಯ ಭವನಕ್ಕೆ ವರ್ಗಾವಣೆಯಾಗಿದ್ದ ಅವತಾರ್ ಸಿಂಗ್, ಮೂಲತಃ ಹರಿಯಾಣದವಾರಾಗಿದ್ದು, ಕೋಲಾರದಿಂದ ಕೆಲಸ ಪ್ರಾರಂಭಿಸಿದ್ದರು ಎಂದು ತಿಳಿದುಬಂದಿದೆ.
ಇಂದು ಬೆಳಗ್ಗೆ ವಾಕಿಂಗ್ ಹೋಗಿ ಬಂದು ಬೆಂಗಳೂರಿನ ಯಲಹಂಕದಲ್ಲಿರುವ ಖಾಸಗಿ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆಯಷ್ಟೇ ಅರಣ್ಯ ಭವನದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವತಾರ್ ಸಿಂಗ್ ಪಾಲ್ಗೊಂಡಿದ್ದರು. ಅಲ್ಲದೆ, ವಿಕಾಸಸೌಧದಲ್ಲಿ ನಡೆದಿದ್ದ ಸಭೆಗೂ ಹಾಜರಾಗಿದ್ದರು.
ಅನಾರೋಗ್ಯ ಸಂಬಂಧ ಐಎಫ್ಎಸ್ ಅಧಿಕಾರಿ ಸಾವಿಗೆ ಶರಣಾಗಿದ್ದಾರೆ ಎಂದು ಹೇಳಲಾಗ್ತಿದೆಯಾದರೂ ಈ ಬಗ್ಗೆ ನಿಖರ ಮಾಹಿತಿ ಇಲ್ಲ. ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.