ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡಗಳ ನಿರ್ಮಾಣಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕೆಎಂಸಿ ಕಾಯ್ದೆಯ ಸೆಕ್ಷನ್ 321 (ಬಿ) ಹಾಕಿದಕ್ಕೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ ವಿ ರಮಣರೆಡ್ಡಿ ಅವರನ್ನು ಹೈಕೋರ್ಟ್ ತೀವ್ರ ತರಾಟೆ ತೆಗೆದುಕೊಂಡಿದೆ.
ಈ ಸಂಬಂಧ ವಕೀಲ ಎಸ್. ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಹಾಗೂ ನ್ಯಾ. ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ವಕೀಲರು ಅಕ್ರಮ ಕಟ್ಟಡ ನಿರ್ಮಾಣಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ತೆಗೆದುಕೊಂಡ ಕ್ರಮದ ಕುರಿತು ಪ್ರಮಾಣ ಪತ್ರ ನ್ಯಾಯಾಲಯಕ್ಕೆ ಸಲ್ಲಿಸಿದರು.
ಇದನ್ನ ಪರಿಗಣಿಸಿದ ನ್ಯಾಯಾಲಯ ಕೆಎಂಸಿ ಕಾಯ್ದೆಯ ಸೆಕ್ಷನ್ 321 (ಬಿ) ಪ್ರಕಾರ ಶಿಕ್ಷೆ ಹಾಗೂ ದಂಡ ವಿಧಿಸುವ ಸಂಬಂಧ ಕರಡು ನಿಯಮಗಳನ್ನು ಸರ್ಕಾರ ರೂಪಿಸಿದೆ. ಈ ಬಗ್ಗೆ ಸಲ್ಲಿಸಿದ ಅಫಿಡವಿಟ್ಗೆ ಹೈಕೋರ್ಟ್ ಗರಂ ಆಗಿ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿಗೆ ತೀವ್ರ ತರಾಟೆ ತೆಗೆದುಕೊಂಡಿತು.
ಅಪರ ಮುಖ್ಯ ಕಾರ್ಯದರ್ಶಿ ಮಟ್ಟದ ಅಧಿಕಾರಿಗೆ ಕಾನೂನಿನ ಕನಿಷ್ಠ ತಿಳುವಳಿಕೆ ಇಲ್ಲ. ಯಾವ ಸೆಕ್ಷನ್ಗಳು ಯಾವುದಕ್ಕೆ ಅನ್ವಯವಾಗುತ್ತವೆ ಎಂಬುದೇ ಅಧಿಕಾರಿಗೆ ತಿಳಿದಂತಿಲ್ಲ. ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಇದೊಂದು ಸೂಕ್ತ ಪ್ರಕರಣ. ನ್ಯಾಯಾಂಗ ನಿಂದನೆ ಕಾಯ್ದೆಯಡಿ ನಿಮ್ಮ ವಿರುದ್ಧ ಏಕೆ ಕ್ರಮ ಜರುಗಿಸಬಾರದು ಎಂದು ಅಪರ ಮುಖ್ಯ ಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆ ವೇಳೆ ಹೈಕೋರ್ಟ್ ಆದೇಶ ಏಕೆ ಪಾಲನೆ ಮಾಡಿಲ್ಲ ಎಂಬ ಬಗ್ಗೆ ವಿವರಣೆ ನೀಡುವಂತೆ ಸರ್ಕಾರಕ್ಕೆ ಸೂಚನೆ ನೀಡಿ ಅ.10ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ.