ಬೆಂಗಳೂರು: ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡುವ ಸಂಬಂಧ ಸರ್ಕಾರ ಖರೀದಿ ಮಾಡಿರುವ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆರುವ ಅವ್ಯವಹಾರವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶಿಸಿದೆ.
ಈ ಕುರಿತು ಮೊಹಮ್ಮದ್ ಆರಿಫ್ ಜಮೀಲ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.
ಅವ್ಯವಹಾರ ಆರೋಪವನ್ನು ನ್ಯಾಯಾಂಗ ತನಿಖೆಗೆ ಕೋರಿ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಹೈಕೋರ್ಟ್ ಹಿಂದಿನ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರಿಗೆ ಸೂಚಿಸಿತ್ತು. ಇಂದು ಅರ್ಜಿ ವಿಚಾರಣೆಗೆ ಬಂದಾಗ ಸರ್ಕಾರದ ಪರ ವಕೀಲರು ಮತ್ತಷ್ಟು ಕಾಲಾವಕಾಶ ನೀಡುವಂತೆ ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಅವ್ಯವಹಾರವನ್ನು ತನಿಖೆಗೆ ವಹಿಸಲು ಕೋರಿ ಸಲ್ಲಿಸಿರುವ ಅರ್ಜಿಗೆ ಮುಂದಿನ ಒಂದು ವಾರದೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಗಡುವು ವಿಧಿಸಿ, ವಿಚಾರಣೆ ಮುಂದೂಡಿತು.