ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಕಲಂ 409ರ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದಿಂದ ಮಾಜಿ ಸಚಿವ ಜನಾರ್ದನ ರೆಡ್ಡಿಯನ್ನು ಆರೋಪ ಮುಕ್ತಗೊಳಿಸಿ ಸಿಬಿಐ ವಿಶೇಷ ಕೋರ್ಟ್ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ಆರು ವಾರಗಳ ಕಾಲ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.
ಈ ಕುರಿತು ಸಿಬಿಐ ಸಲ್ಲಿಸಿದ್ದ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿ ವಿಚಾರಣೆ ಇಂದು ನ್ಯಾಯಮೂರ್ತಿ ಬಿ.ಎ. ಪಾಟೀಲ್ ಅವರಿದ್ದ ಏಕಸದಸ್ಯ ಪೀಠದಲ್ಲಿ ನಡೆಯಿತು. ಸಿಬಿಐ ಪರ ವಾದ ಮಂಡಿಸಿದ ವಕೀಲ ಪಿ. ಪ್ರಸನ್ನಕುಮಾರ್ ಅವರು, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ವಿರುದ್ಧ ಐಪಿಸಿ ಕಲಂ 409ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದು ಗಂಭೀರ ಪ್ರಕರಣ. ಆದರೆ ಸಿಬಿಐ ವಿಶೇಷ ಕೋರ್ಟ್ ಇದನ್ನ ಪರಿಗಣಿಸದೆ ರೆಡ್ಡಿ ಅವರನ್ನು ಆರೋಪ ಮುಕ್ತಗೊಳಿಸಿ ಆದೇಶ ಹೊರಡಿಸಿತ್ತು. ಹೀಗಾಗಿ ಈ ಆದೇಶಕ್ಕೆ ತಡೆ ನೀಡಬೇಕೆಂದು ಮನವಿ ಮಾಡಿದ್ರು. ವಕೀಲರ ವಾದ ಆಲಿಸಿದ ನ್ಯಾಯಾಲಯ ಆರು ವಾರಗಳ ಕಾಲ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.