ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಹಗರಣದಲ್ಲಿ ಸಿಲುಕಿರುವ ಠೇವಣಿ ಹಿಂದಿರುಗಿಸಲು ಕೋರಿ ಸುಮಾರು 65 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಐಎಂಎ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಪಾಷಾ ಸೇರಿದಂತೆ ಹಲವರು ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರಿ ವಕೀಲರು ಪ್ರಮಾಣ ಪತ್ರ ಸಲ್ಲಿಸಿ, 2021ರ ಜನವರಿ 3ರ ಒಳಗೆ ಠೇವಣಿ ಹಿಂದಿರುಗಿಸುವಂತೆ ಕೋರಿ ಒಟ್ಟು 65 ಸಾವಿರ ಅರ್ಜಿಗಳನ್ನು ಠೇವಣಿದಾರರು ಸಲ್ಲಿಸಿದ್ದಾರೆ. ಅಷ್ಟೂ ಅರ್ಜಿಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಜರುಗಿಸಲು ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಸಾಧ್ಯವಾದಷ್ಟು ಬೇಗ ಠೇವಣಿದಾರರಿಗೆ ಹಣ ಹಿಂದಿರುಗಿಸಬೇಕು. ಹೀಗಾಗಿ, ಎಷ್ಟು ಸಮಯದೊಳಗೆ ಅರ್ಜಿಗಳ ಪರಿಶೀಲನಾ ಕಾರ್ಯ ಪೂರ್ಣಗೊಳಿಸಲಾಗುತ್ತದೆ ಎಂಬ ಬಗ್ಗೆ ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಮಾಹಿತಿ ನೀಡಿ ಎಂದು ಸೂಚಿಸಿತು. ಜತೆಗೆ, ಪ್ರಕರಣದ ಕುರಿತ ತನಿಖೆಯ ಪ್ರಗತಿ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ನಿರ್ದೇಶಿಸಿ ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಿತು.
ಇದನ್ನೂ ಓದಿ: ಗೌಪ್ಯತಾ ನೀತಿ ಒಪ್ಪಲು ಆಗದಿದ್ದರೆ ವಾಟ್ಸ್ಆ್ಯಪ್ ಬಳಸಬೇಡಿ; ದೆಹಲಿ ಹೈಕೋರ್ಟ್