ಬೆಂಗಳೂರು: ಐ ಮಾನಿಟರಿ ಅಡ್ವೈಸರಿ (ಐಎಂಎ) ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಆರ್.ರೋಷನ್ ಬೇಗ್ ಆಸ್ತಿ ಜಪ್ತಿಗೆ ಮೀನಾಮೇಷ ಎಣಿಸುತ್ತಿರುವ ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿರುವ ಹೈಕೋರ್ಟ್, ಈ ಸಂಬಂಧ ಸರ್ಕಾರ ತನ್ನ ನಿಲುವು ಮರುಪರಿಶೀಲಿಸುವಂತೆ ನಿರ್ದೇಶಿಸಿದೆ.
ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಪಾಷಾ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ. ನಿನ್ನೆ ನಡೆದ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ವಾದಿಸಿ, ರೋಷನ್ ಬೇಗ್ ವಿರುದ್ಧದ ಸಿಬಿಐ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಆದ್ದರಿಂದ ಈ ಹಂತದಲ್ಲಿ ಬೇಗ್ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು.
ಇಂದು ನಡೆದ ವಿಚಾರಣೆಯಲ್ಲಿ ಸರ್ಕಾರದ ಪರ ವಕೀಲರು, ಸಿಬಿಐ ವರದಿಗೆ ಎದುರು ನೋಡಲಾಗುತ್ತಿದೆ ಎಂದು ತಿಳಿಸಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಸರ್ಕಾರ ತನ್ನ ಅಧಿಕಾರ ಬಳಸುತ್ತಿಲ್ಲ. ಆಸ್ತಿ ಜಪ್ತಿಗೆ ಐಎಂಎ ಹಾಗೂ ರೋಷನ್ ಬೇಗ್ ನಡುವಿನ ವ್ಯವಹಾರ ಕುರಿತು ಸಿಬಿಐ ವರದಿಗಾಗಿ ಕಾಯುತ್ತಾ ಕೂರುವ ಅಗತ್ಯವಿಲ್ಲ. ಐಎಂಎ ಕುರಿತ ಆಡಿಟ್ ಆಧರಿಸಿ ಆಸ್ತಿ ಜಪ್ತಿಗೆ ಕ್ರಮ ಕೈಗೊಳ್ಳಬಹುದು. ಈ ನಿಟ್ಟಿನಲ್ಲಿ ಸರ್ಕಾರ ತನ್ನ ನಿಲುವನ್ನು ಮುಂದಿನ ಮೂರು ತಿಂಗಳಲ್ಲಿ ಮರುಪರಿಶೀಲಿಸಬೇಕು ಎಂದು ಸೂಚಿಸಿ ವಿಚಾರಣೆ ಮುಂದೂಡಿತು.