ಬೆಂಗಳೂರು : ಐಎಂಎ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಿರುವ ಸಕ್ಷಮ ಪ್ರಾಧಿಕಾರದಲ್ಲಿ ಖಾಲಿಯಿದ್ದ ಸಹಾಯಕ ಆಯುಕ್ತ ಮತ್ತು ಜಂಟಿ ಕಾರ್ಯದರ್ಶಿ ಹುದ್ದೆಗಳಿಗೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಐಎಂಎ ಹಗರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಪಾಷಾ ಮತ್ತಿತರರು ಸಲ್ಲಿಸಿದ್ದ ಪಿಐಎಲ್ ಅರ್ಜಿಗಳನ್ನು ಹಂಗಾಮಿ ಸಿಜೆ ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ವಕೀಲರು, ಸಕ್ಷಮ ಪ್ರಾಧಿಕಾರದ ಸಹಾಯಕ ಆಯುಕ್ತ ಮತ್ತು ವಿಶೇಷ ಅಧಿಕಾರಿ ಹುದ್ದೆಗೆ ಕೆಎಎಸ್ ಅಧಿಕಾರಿ ಅಬಿದ್ ಗಡ್ಯಾಳ್ ಹಾಗೂ ಜಂಟಿ ಕಾರ್ಯದರ್ಶಿ ಹುದ್ದೆಗೆ ಆರ್.ಶಿಲ್ಪಾ ಅವರನ್ನು ನಿಯೋಜಿಸಲಾಗಿದೆ. ಅಬಿದ್ ಗಡ್ಯಾಳ್ ಕರ್ತವ್ಯಕ್ಕೆ ವರದಿ ಮಾಡಿಕೊಂಡಿಲ್ಲ. ಹೀಗಾಗಿ ಅವರ ವಿರುದ್ಧ ಇಲಾಖೆ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದರು.
ಜಾರಿ ನಿರ್ದೇಶನಾಲಯ ಪರ ವಕೀಲರು, ರೋಷನ್ ಬೇಗ್ ಆಸ್ತಿ ಜಪ್ತಿ ಸೇರಿದಂತೆ ಪ್ರಕರಣದ ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕಿತ್ತು. ಸದ್ಯ ವರದಿ ಸಿದ್ಧವಾಗಿದ್ದರೂ ಕಾರಣಾಂತರಗಳಿಂದ ಸಲ್ಲಿಸಲು ಆಗಿಲ್ಲ. ಶೀಘ್ರದಲ್ಲೇ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಹೇಳಿಕೆ ದಾಖಲಿಸಿಕೊಂಡ ಪೀಠ, ವಿಚಾರಣೆಯನ್ನು ನ.22ಕ್ಕೆ ಮುಂದೂಡಿತು.