ಬೆಂಗಳೂರು: ಐಎಂಎ ವಂಚನೆ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ಆರೋಪ ಎದುರಿಸುತ್ತಿರುವ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ ಹಾಗೂ ಅಜಯ್ ಹಿಲೋರಿಗೆ ಸಂಕಷ್ಟ ಎದುರಾಗಿದೆ. ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ಪ್ರಕರಣದಿಂದ ಖುಲಾಸೆ ಮಾಡಿರುವ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗುವುದು. ಹಾಗೆಯೇ, ಮತ್ತೋರ್ವ ಆರೋಪಿ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ಸರ್ಕಾರದ ಅನುಮತಿ ಕೇಳಿ ಮನವಿ ಸಲ್ಲಿಸಲಾಗುವುದು ಎಂದು ಹೈಕೋರ್ಟ್ಗೆ ಸಿಬಿಐ ಮಾಹಿತಿ ನೀಡಿದೆ.
ಐಎಂಎ ಬಹುಕೋಟಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಸಿಬಿಐ ಈ ಮಾಹಿತಿ ನೀಡಿದೆ. ವಿಚಾರಣೆ ವೇಳೆ ಸಿಬಿಐ ಪರ ವಕೀಲ ಪಿ. ಪ್ರಸನ್ನ ಕುಮಾರ್ ಪೀಠಕ್ಕೆ ಮಾಹಿತಿ ನೀಡಿ, ಐಎಂಎ ಹಗರಣಕ್ಕೆ ಸಂಬಂಧಿಸಿದ ಎಲ್ಲ ಪ್ರಕರಣಗಳ ತನಿಖೆ ರ್ಪೂಣಗೊಂಡಿದೆ. ಮಾಜಿ ಸಚಿವ ರೋಷನ್ ಬೇಗ್ ವಿರುದ್ಧ ಹೆಚ್ಚುವರಿ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವಿರುದ್ಧ ಸಿಬಿಐ ದಾಖಲಿಸಿದ್ದ ಎಫ್ಐಆರ್ ಹಾಗೂ ಹೆಚ್ಚುವರಿ ದೋಷಾರೋಪ ಪಟ್ಟಿ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿಸಿದೆ. ಸದ್ಯದದಲ್ಲೇ ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು. ಮತ್ತೋರ್ವ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ವಿರುದ್ಧ ಪ್ರಾಸಿಕ್ಯೂಷನ್ಗೆ ಪೂರ್ವಾನುಮತಿ ಕೋರಿ ಸರ್ಕಾರಕ್ಕೆ ಶೀಘ್ರದಲ್ಲೇ ಮನವಿ ಸಲ್ಲಿಸಲಾಗುವುದು ಎಂದು ವಿವರಿಸಿದರು.
ಹೇಳಿಕೆ ದಾಖಲಿಸಿಕೊಂಡ ಪೀಠ, ಪುರ್ನಾನುಮತಿ ಕೋರಿ ಸಿಬಿಐ ಸಲ್ಲಿಸುವ ಮನವಿಯನ್ನು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರ ತುರ್ತಾಗಿ ಪರಿಗಣಿಸಬೇಕು ಎಂದು ಸರ್ಕಾರಕ್ಕೆ ಸೂಚಿಸಿ, ವಿಚಾರಣೆಯನ್ನು ಜೂ.25ಕ್ಕೆ ಮುಂದೂಡಿತು.
ಇದನ್ನೂ ಓದಿ:ಐಎಂಎ ಹಗರಣ: ರೋಷನ್ ಬೇಗ್ ಆಸ್ತಿ ಜಪ್ತಿಗೆ ಹೈಕೋರ್ಟ್ ತಾಕೀತು
ವಿಶೇಷ ನ್ಯಾಯಾಲಯ ಸ್ಥಾಪನೆ :
ಇದೇ ವೇಳೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪೀಠಕ್ಕೆ ಮಾಹಿತಿ ನೀಡಿ, ಕರ್ನಾಟಕ ರಾಜ್ಯ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿನ ಠೇವಣಿದಾರರ ಹಿತರಕ್ಷಣಾ ಕಾಯ್ದೆ (ಕೆಪಿಐಡಿ)-2004ರ ಅಡಿ ವಿಶೇಷ ನ್ಯಾಯಾಲಯ ಸ್ಥಾಪಿಸಿ ಜೂ.10 ರಂದು ಅಧಿಸೂಚನೆ ಹೊರಡಿಸಲಾಗಿದೆ ಎಂದರು.