ಬೆಂಗಳೂರು : ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ರಾಜ್ಯಕ್ಕೆ 5,612.50 ಕಿ.ಮೀ ರಸ್ತೆ ಹಂಚಿಕೆ ಮಾಡಲಾಗಿದೆ. ಅದೇ ರೀತಿ ಕೇಂದ್ರ ಸರ್ಕಾರದ ಸ್ವಾಮಿತ್ವ ಯೋಜನೆಯನ್ನು ರಾಜ್ಯದಲ್ಲೂ ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಾಯೋಗಿಕವಾಗಿ 5 ಜಿಲ್ಲೆಗಳಲ್ಲಿ ಈ ಯೋಜನೆ ಜಾರಿಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಪ್ರಸ್ತುತ ಹಂಚಿಕೆಯಾಗಿರುವ 5,612.50 ಕಿ.ಮೀ ರಸ್ತೆ ಅಭಿವೃದ್ಧಿಗೆ ಕೇಂದ್ರದ ಶೇ.60ರಷ್ಟು ಹಾಗೂ ರಾಜ್ಯ ಸರ್ಕಾರ ಶೇ.40 ರಷ್ಟು ಅನುದಾನ ನೀಡಲಿದೆ ಎಂದು ಹೇಳಿದರು.
ಎಲ್ಲಾ ರಸ್ತೆ ಮತ್ತು ಸೇತುವೆ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ವಿವಿಧ ಹಂತದ ಪ್ರಗತಿಯಲ್ಲಿವೆ. ಉಳಿದ 2,410.93 ಕಿ.ಮೀ. ಉದ್ದದ ರಸ್ತೆ ಕಾಮಗಾರಿಗಳ ಪ್ರಸ್ತಾವನೆ ಕೇಂದ್ರ ಸರ್ಕಾರದ ಅನುಮೋದನೆ ನಿರೀಕ್ಷೆಯಲ್ಲಿದೆ ಎಂದು ಮಾಹಿತಿ ನೀಡಿದರು.
ಸ್ವಾಮಿತ್ವ ಯೋಜನೆ ರಾಜ್ಯದಲ್ಲೂ ಅನುಷ್ಠಾನ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಾಮಿತ್ವ ಯೋಜನೆಯನ್ನು ಸರ್ವೆ ಆಫ್ ಇಂಡಿಯಾ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಭಾಗಿತ್ವದಲ್ಲಿ ರಾಜ್ಯದಲ್ಲೂ ಅನುಷ್ಠಾನ ಮಾಡಲಾಗಿದೆ. ಸ್ವಾಮಿತ್ವ ಯೋಜನೆಯನ್ನು ರಾಜ್ಯದಲ್ಲಿ ಪ್ರಾಯೋಗಿಕವಾಗಿ ರಾಮನಗರ, ಮೈಸೂರು, ಹಾಸನ, ಬೆಳಗಾವಿ, ತುಮಕೂರು ಜಿಲ್ಲೆಗಳ 10 ಗ್ರಾಮ ಪಂಚಾಯ್ತಿಗಳಲ್ಲಿನ 83 ಗ್ರಾಮಗಳಲ್ಲಿ ಅನುಷ್ಠಾನಗೊಳಿಸಿ 763 ಆಸ್ತಿ ಮಾಲೀಕರಿಗೆ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಹೇಳಿದರು.
ಪ್ರಾಯೋಗಿಕವಾಗಿ ಈ ಯೋಜನೆ ಯಶಸ್ವಿಯಾದ ನಂತರ ಮೊದಲ ಹಂತದಲ್ಲಿ 16 ಜಿಲ್ಲೆಗಳಲ್ಲಿ ಈ ಸ್ವಾಮಿತ್ವ ಯೋಜನೆಯನ್ನು ಅನುಷ್ಠಾನಗೊಳಿಸುವ ಉದ್ದೇಶ ಇದೆ. ಬೆಳಗಾವಿ, ವಿಜಯಪುರ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲ್ಬುರ್ಗಿ, ಹಾಸನ, ಕೊಡಗು, ಕೊಪ್ಪಳ, ಮೈಸೂರು, ರಾಮನಗರ, ತುಮಕೂರು, ಉತ್ತರ ಕನ್ನಡ, ಯಾದಗಿರಿ ಜಿಲ್ಲೆಗಳಲ್ಲಿ ಅನುಷ್ಠಾನವಾಗಲಿದೆ. ಮಾರ್ಚ್ 2021 ರ ಅಂತ್ಯಕ್ಕೆ 16,600 ಗ್ರಾಮಗಳಲ್ಲಿ ಈ ಯೋಜನೆಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.