ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯ ಆರ್ಭಟ ಶುರುವಾಗಿದ್ದು, ಮುಂದಿನವಾರ ಮಳೆಯ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಬಗ್ಗೆ ಮಾತನಾಡಿದ ಹವಾಮಾನ ಮುನ್ಸೂಚನೆ ವಿಭಾಗದ ನಿರ್ದೇಶಕರಾದ ಸಿ.ಎಸ್ ಪಾಟೀಲ್, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆ ಏಪ್ರಿಲ್ 9ರಿಂದ ಏಪ್ರಿಲ್ 13ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಬೀದರ್, ರಾಯಚೂರು, ವಿಜಯಪುರದಲ್ಲಿ ಏ. 9, 11, 12, 13 ರಂದು ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.
ಚಾಮರಾಜನಗರ, ಚಿಕ್ಕಮಂಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದ ಕೆಲವೆಡೆ ಏ.9ರಿಂದ 13ರವರೆಗೆ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ. ರಾಜ್ಯಾದ್ಯಂತ ಏ. 12 ಹಾಗೂ 13ರಂದು ಮಳೆ ಪ್ರಮಾಣ ಏರಿಕೆಯಾಗುವ ಸಾಧ್ಯತೆಗಳಿದೆ ಎಂದು ಮಾಹಿತಿ ನೀಡಿದ್ದಾರೆ.
ಇಂದು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಹಗುರ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆದಿದೆ. ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 33ರಿಂದ 36 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25-26 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 37ಡಿಗ್ರಿ ಸೆಲ್ಸಿಯಸ್, ಕೊಪ್ಪಳ 38.5, ರಾಯಚೂರು 39.4, ಗದಗ 36.4, ದಾವಣಗೆರೆ 37, ಬೆಂಗಳೂರಿನಲ್ಲಿ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಇದನ್ನೂ ಓದಿ: ನಾಳೆಯಿಂದ ರಾಜ್ಯದ 8 ನಗರಗಳಲ್ಲಿ ಕೊರೊನಾ ಕರ್ಫ್ಯೂ... ನೂತನ ಮಾರ್ಗಸೂಚಿ ಪ್ರಕಟ