ಬೆಂಗಳೂರು: ಸೇವೆ ಖಾಯಂಗೊಳಿಸುವಂತೆ ಆಗ್ರಹಿಸಿ ಕಳೆದ ಒಂದೂವರೆ ತಿಂಗಳಿನಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮಾಡುತ್ತಿರುವ ಅತಿಥಿ ಉಪನ್ಯಾಸಕರು ಬೆಂಗಳೂರು ತಲುಪಿದ್ದಾರೆ. ಜನವರಿ 1ರಿಂದ ತುಮಕೂರಿನಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದ ಅತಿಥಿ ಉಪನ್ಯಾಸಕರು ನಗರದ ಫ್ರೀಡಂ ಪಾರ್ಕ್ನಲ್ಲಿ ಇಂದಿನಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ನೇತೃತ್ವದಲ್ಲಿ ಜಮಾಯಿಸಿದ ನೂರಾರು ಅತಿಥಿ ಉಪನ್ಯಾಸಕರು ಬೃಹತ್ ಪ್ರತಿಭಟನೆ ಆರಂಭಿಸಿದ್ದಾರೆ.
ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಲು ಸೂಕ್ತ ಯೋಜನೆ ರೂಪಿಸುವುದಾಗಿ ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಕೊಟ್ಟ ಮಾತಿನಂತೆ ನಡೆದುಕೊಳ್ಳಲು ನಾವು ಸರ್ಕಾರಕ್ಕೆ ಕೇಳುತ್ತಿದ್ದೇವೆ. 10 -15 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನಮಗೆ ಭದ್ರತೆ ಕೊಡಿ ಎಂದು ಕೇಳುವುದು ನಮ್ಮ ಹಕ್ಕು. ಅದಕ್ಕಾಗಿ ಅನೇಕ ದಿನಗಳಿಂದ ತರಗತಿ ಬಹಿಷ್ಕರಿಸಿ ಮುಷ್ಕರ ನಡೆಸುತ್ತಿದ್ದರೂ ನಮ್ಮ ಬೇಡಿಕೆ ಈಡೇರಿಸಲು ಸರ್ಕಾರ ಸ್ಪಂದಿಸಿಲ್ಲ. ಹಾಗಾಗಿ ಹೋರಾಟ ನಡೆಸುತ್ತಿದ್ದೇವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೆ, ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಬಹುತೇಕ ಅತಿಥಿ ಉಪನ್ಯಾಸಕರನ್ನೇ ಅವಲಂಬಿಸಿದೆ. ಆದರೆ, ಸುಮಾರು ಹತ್ತಾರು ವರ್ಷಗಳಿಂದ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಾ ಬಂದಿರುವ ಅತಿಥಿ ಉಪನ್ಯಾಸಕರ ಬದುಕು ಮಾತ್ರ ಅತಂತ್ರವಾಗಿದೆ. ಅತಿಥಿ ಎಂಬ ಪದ್ಧತಿ ಅಂತ್ಯಗೊಳಿಸಿ ಸೇವೆ ಖಾಯಂಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಅತಿಥಿ ಉಪನ್ಯಾಸಕರಿಗೆ ₹5 ಸಾವಿರ ವೇತನ ಹೆಚ್ಚಳ- ಘೋಷಣೆ: "ಮುಷ್ಕರ ಕೈಗೊಂಡಿರುವ ಅತಿಥಿ ಉಪನ್ಯಾಸಕರ ಪ್ರಮುಖ ಬೇಡಿಕೆಯಾದ ಸೇವಾ ಕಾಯಂಗೊಳಿಸಲು ಸರ್ಕಾರ ಒಪ್ಪಿಲ್ಲ. ಆದರೆ, ಗರಿಷ್ಠ 5,000 ರೂ. ವೇತನ ಹೆಚ್ಚಿಸಲು ಅನುಮತಿ ನೀಡಿದೆ" ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಬೆಂಗಳೂರಿನ ವಿಕಾಸಸೌಧದಲ್ಲಿ ಇತ್ತೀಚೆಗೆ ತಿಳಿಸಿದ್ದರು.
"ಅತಿಥಿ ಉಪನ್ಯಾಸಕರಿಗೆ ಗರಿಷ್ಠ 5 ಸಾವಿರ ರೂಪಾಯಿ ವೇತನ ಹೆಚ್ಚಳ ಮಾಡಲು ಸಿಎಂ ಸಮ್ಮತಿ ಸೂಚಿಸಿದ್ದಾರೆ. ಅವರ ಸೇವಾವಧಿ ಆಧಾರದ ಮೇಲೆ ವೇತನ ಪರಿಷ್ಕರಣೆಯಾಗಲಿದೆ. ಅದರಂತೆ ಗರಿಷ್ಠ 32,000 ರೂಪಾಯಿ ವೇತನ ಪಡೆಯುವ ಅತಿಥಿ ಉಪನ್ಯಾಸಕರಿಗೆ 5,000 ರೂಪಾಯಿ ವೇತನ ಹೆಚ್ಚಾಗಲಿದೆ. ಇದರಿಂದ ಬೊಕ್ಕಸಕ್ಕೆ ವಾರ್ಷಿಕ 55 ಕೋಟಿ ರೂಪಾಯಿ ಹೊರೆಯಾಗಲಿದೆ" ಮಾಹಿತಿ ನೀಡಿದ್ದರು.
ಇದನ್ನೂ ಓದಿ: ರೌಡಿಶೀಟರ್ಗಳು ಪಕ್ಷದ ಪಿಲ್ಲರ್ಗಳೆಂದು ಬಿಜೆಪಿ ಒಪ್ಪಿಕೊಳ್ಳಲಿ : ಪ್ರಸಾದ್ ಅಬ್ಬಯ್ಯ