ಬೆಂಗಳೂರು: ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ. ಸರ್ವಾಧಿಕಾರಿ ಪ್ರವೃತ್ತಿಯ ಪ್ರಧಾನಿಯನ್ನು ನಾವು ಕಾಣುತ್ತಿದ್ದೇವೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೇಶದ ಆರ್ಥಿಕ ಸ್ಥಿತಿ ಡೋಲಾಯಮಾನವಾಗಿದೆ. ಈ ಪರಿಸ್ಥಿತಿಯನ್ನು ಬೇರೆಡೆ ಸೆಳೆಯುವ ಹಾಗೂ ತಮ್ಮ ರಾಜಕೀಯ ವೈರಿಗಳನ್ನು ಮಟ್ಟಹಾಕುವ ಕಾರ್ಯಕ್ಕೆ ಬಿಜೆಪಿ ಮುಂದಾಗಿದೆ ಎಂದರು.
ಕಾಂಗ್ರೆಸ್ ನಾಯಕರ ವಿರುದ್ಧ ರಾಜಕೀಯ ಸೇಡು ತೀರಿಸಿಕೊಳ್ಳಲು ಒಬ್ಬರ ನಂತರ ಮತ್ತೊಬ್ಬರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ಬಂಧಿಸಲಾಗುತ್ತಿದೆ. ಕೇಂದ್ರದ ಮಾಜಿ ಸಚಿವ ಚಿದಂಬರಂ ಅವರನ್ನು ಅರೆಸ್ಟ್ ಮಾಡಲಾಗಿದೆ. ಸೋನಿಯಾ ಗಾಂಧಿಯವರ ಕುಟುಂಬ ಅದರಲ್ಲೂ ಪ್ರಮುಖವಾಗಿ ಅವರ ಅಳಿಯನ ಮೇಲೆ ಕೇಸುಗಳನ್ನು ದಾಖಲಿಸುವ ಕಾರ್ಯ ನಡೆದಿದೆ ಎಂದು ಹೇಳಿದ್ರು.
ರಾಜ್ಯದ ಅತ್ಯಂತ ಜನಪ್ರಿಯ ನಾಯಕ ಡಿ.ಕೆ. ಶಿವಕುಮಾರ್ ಹಾಗೂ ಅವರ ಕುಟುಂಬವನ್ನು ರಾಜಕೀಯ ದ್ವೇಷಕ್ಕೆ ಬಳಸಿಕೊಳ್ಳಲಾಗುತ್ತಿದೆ. ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಆಶ್ರಯ ನೀಡಿದ್ದನ್ನೇ ಗುರಿಯಾಗಿಸಿಕೊಂಡು ಅವರಿಗೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.