ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ 45 ವರ್ಷ ಮೇಲ್ಪಟ್ಟ ಶೇ.80ರಷ್ಟು ಕೈದಿಗಳಿಗೆ ವ್ಯಾಕ್ಸಿನೇಷನ್ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಗುರುವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ ಪರಿಶೀಲಿಸಿ ಈ ಕುರಿತು ಮಾತನಾಡಿದರು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಜೈಲಿನ ಆಸ್ಪತ್ರೆಯನ್ನು ಸ್ವಚ್ಛವಾಗಿಟ್ಟುಕೊಂಡಿದ್ದಾರೆ. ಹೊಸದಾಗಿ ಬರುವ ಕೈದಿಗಳಿಗೆ 14 ದಿನ ಕ್ವಾರೆಂಟೈನ್ ಮುಂದುವರೆಸಲಾಗುವುದು. ರಾಜ್ಯದಲ್ಲಿ 240 ಕೈದಿಗಳು ಕೊರೊನಾದಿಂದ ಬಳಲುತ್ತಿದ್ದಾರೆ. ಅವರೆಲ್ಲರೂ ಎ.ಸಿಮ್ಟಾಮೆಟಿಕ್ ಹೊಂದಿರುವರಾಗಿದ್ದಾರೆ. ಕೆಲವರಿಗೆ ಬೆಂಗಳೂರಿನ ಹಜ್ ಭವನದಲ್ಲಿ ಐಸೋಲೇಶನ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರತಿವಾರ ಹೆಲ್ತ್ ಕ್ಯಾಂಪ್ ಮಾಡುವಂತೆ ಸೂಚನೆ ಕೊಟ್ಟಿದ್ದೇನೆ. ಎಸ್‌ಡಿಆರ್ ಎಫ್ ನಿಂದ 5 ಕೋಟಿ ರೂ.ಬಿಡುಗಡೆ ಮಾಡಲಾಗುತ್ತದೆ. ಉಚ್ಚ ನ್ಯಾಯಾಲಯದ ಮಾರ್ಗದರ್ಶನದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ. 45 ವರ್ಷ ಮೇಲ್ಪಟ್ಟ ಶೇ.80ರಷ್ಟು ಕೈದಿಗಳಿಗೆ ವ್ಯಾಕ್ಸಿನೇಷನ್ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಇನ್ನಷ್ಟು ಸೌಲಭ್ಯ ಬೇಕಾಗಿದೆ. ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಅವಶ್ಯಕತೆ ಇದೆ. ಕೈದಿಗಳ ವಿಚಾರಣೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಗಡಿಯಲ್ಲಿ ನುಗ್ಗುವವರ ಮೇಲೆ ತಡೆಗಾಗಿ ಕ್ರಮ ಕೈಗೊಳ್ಳಲು ಸೂಚಿಸಲಾಗುವುದು. ಆರ್‌ಟಿಸಿಆರ್ ಟೆಸ್ಟ್ ಕಡ್ಡಾಯವಾಗಿ ಮಾಡಬೇಕು. ಬೆಂಗಳೂರು ಗ್ರಾಮಾಂತರ ಎಸ್ಪಿಗೆ ಈ ಬಗ್ಗೆ ಸೂಚನೆ ಕೊಡುತ್ತೇನೆ. ಪ್ರತಿ ವಾಹನ ತಪಾಸಣೆಗೆ ಸೂಚನೆ ನೀಡುತ್ತೇನೆ. ಮಹಾರಾಷ್ಟ್ರ, ತಮಿಳುನಾಡು, ಕೇರಳ ಭಾಗದಿಂದ ಬರುವ ಗಡಿಗಳಲ್ಲಿ ಬಿಗಿ ಭದ್ರತೆ ಮಾಡಲಾಗುವುದು. ನಾಳೆಯಿಂದ ಗಡಿಗಳು ಇನ್ನಷ್ಟು ಭದ್ರವಾಗಲಿವೆ ಎಂದು ತಿಳಿಸಿದ್ದಾರೆ.