ಬೆಂಗಳೂರು : ರಾಯಚೂರಿನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿರಿಸಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆಸಿದ ಘಟನೆ ಖಂಡಿಸಿ ಇಂದು ಬೆಂಗಳೂರು ವಕೀಲರ ಸಂಘದ (ಎಎಬಿ) ಪದಾಧಿಕಾರಿಗಳು ಪ್ರತಿಭಟಿಸಿದರು.
ಎಎಬಿ ಅಧ್ಯಕ್ಷ ಹಾಗೂ ಹಿರಿಯ ವಕೀಲ ವಿವೇಕ್ ರೆಡ್ಡಿ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ವಕೀಲರು ಹೈಕೋರ್ಟ್‌ನ ಗೋಲ್ಡನ್ ಗೇಟ್ ಮುಂಭಾಗ ಸೇರಿ ಕೆಲ ಕಾಲ ಧರಣಿ ನಡೆಸಿದರು. ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ, ಘಟನೆ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ನಿನ್ನೆ ಸಂಘದ ಪದಾಧಿಕಾರಿಗಳು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿಯಾಗಿ ಮನವಿ ಸಲ್ಲಿಸಿದ್ದೇವೆ.
ಇದನ್ನೂ ಓದಿ: ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಆರೋಪ ಪ್ರಕರಣ: ನ್ಯಾಯಾಧೀಶರಿಂದ ವಿವರಣೆ ಕೇಳಿದ ಹೈಕೋರ್ಟ್
ಸಂವಿಧಾನ ಶಿಲ್ಪಿಗೆ ಅಪಮಾನ ಮಾಡಿದ್ದನ್ನು ಖಂಡಿಸಿ ಇಂದು ಪ್ರತಿಭಟನೆ ನಡೆಸುತ್ತಿದ್ದೇವೆ. ಸಂವಿಧಾನ ರಚಿಸಿದ ಮಹಾನ್ ವ್ಯಕ್ತಿಗೆ ಗಣರಾಜ್ಯೋತ್ಸವದ ದಿನವೇ ಅಪಮಾನ ಮಾಡಿರುವುದು ಸರಿಯಲ್ಲ. ಈ ಕುರಿತು ಹೈಕೋರ್ಟ್ ನಿಷ್ಪಕ್ಷಪಾತ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇವೆ. ಮುಖ್ಯವಾಗಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದರು.
ಗಣರಾಜ್ಯೋತ್ಸವ ದಿನದಂದು ರಾಯಚೂರಿನಲ್ಲಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ನಂತರ ಧ್ವಜಾರೋಹಣ ಮಾಡಿದರು ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ರಾಜ್ಯಾದ್ಯಂತ ಸಂಘ-ಸಂಸ್ಥೆಗಳು ಪ್ರತಿಭಟನೆ ನಡೆಸುತ್ತಿವೆ.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ