ಬೆಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಹಲವೆಡೆ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.
ಬೆಂಗಳೂರು, ಕಲಬುರಗಿಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಅಪಾರ ಸಂಖ್ಯೆಯಲ್ಲಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು ಪೊಲೀಸರು ಹಲವರನ್ನು ಬಂಧಿಸಿದ್ದಾರೆ.
ಹುಬ್ಬಳ್ಳಿ:
ಅವಳಿ ನಗರವಾದ ಹುಬ್ಬಳ್ಳಿ-ಧಾರವಾಡದಲ್ಲಿ 3 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೋಲಿಸ್ ಆಯುಕ್ತ ಆರ್.ದೀಲಿಪ್ ತಿಳಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಗುಂಪಾಗಿ ನಿಲ್ಲುವುದು ಹಾಗೂ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ. ನಗರದಲ್ಲಿ ಶಾಂತಿಭಂಗ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಚಿತ್ರದುರ್ಗ:
ಪೌರತ್ವ ಕಾಯ್ದೆ ವಿರುದ್ಧ ಮುಸ್ಲಿಂ ಸಂಘಟನೆಗಳೂ ಸೇರಿದಂತೆ ಎಡಪಂಥೀಯ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಮುಜಾಗೃತಾ ಕ್ರಮವಾಗಿ ಯಾವುದೇ ಪ್ರತಿಭಟನೆ ನಡೆಸಲು ಅನುಮತಿ ಪಡೆಯುವಂತೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಅರುಣ್ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಹಾವೇರಿ:
ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು ಜನಜೀವನ ಎಂದಿನಂತೆ ಸಾಗುತ್ತಿದೆ. ಬಸ್ ಸಂಚಾರದಲ್ಲೂ ಯಾವುದೇ ವ್ಯತ್ಯಯವಾಗಿಲ್ಲ. ಶಾಲಾ ಕಾಲೇಜುಗಳು ಎಂದಿನಂತೆ ನಡೆಯುತ್ತಿವೆ.