ಬೆಂಗಳೂರು: ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಹಿನ್ನೆಲೆಯಲ್ಲಿ ಜಾಗೃತಿ ನಡಿಗೆಗೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಹಾಗು ಅಬಕಾರಿ ಸಚಿವ ಕೆ.ಗೋಪಾಲಯ್ಯ ಚಾಲನೆ ನೀಡಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್‌ಎಸ್ಎಸ್ ಮತ್ತು ಅಬಕಾರಿ ಇಲಾಖೆ ನೇತೃತ್ವದಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ನಡಿಗೆ ಹಮ್ಮಿಕೊಳ್ಳಲಾಗಿತ್ತು. ಕಂಠೀರವ ಕ್ರೀಡಾಂಗಣದಿಂದ ಆರಂಭವಾದ ಜಾಗೃತಿ ನಡಿಗೆಯಲ್ಲಿ ಸಚಿವರು ಹೆಜ್ಜೆ ಹಾಕಿದರು. ನಟ ನೀನಾಸಂ ಸತೀಶ್, ಹಿರಿಯ ನಟಿ ಭಾವನಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ: ರೌಡಿಗಳ ಪರೇಡ್ ನಡೆಸಿ, ಎಚ್ಚರಿಕೆ ನೀಡಿದ ವಿಜಯಪುರ ಎಸ್ಪಿ
ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಎಲ್ಲರ ಜವಾಬ್ದಾರಿ. ವಿದ್ಯಾರ್ಥಿಗಳು, ಯುವಕರು ಡ್ರಗ್ಸ್ಗೆ ದಾಸರಾಗಿ, ಅದರಿಂದ ಹೊರಬರಲಾಗದೇ ಪರಿತಪಿಸುತ್ತಿದ್ದಾರೆ. ಡ್ರಗ್ಸ್ ಸೇವನೆಯಿಂದ ಮಾನಸಿಕ ಹಾಗೂ ದೈಹಿಕ ಸಮಸ್ಯೆಗಳಿಗೆ ತುತ್ತಾಗಿ ಜೀವನವೇ ನಾಶವಾಗುತ್ತದೆ. ಡ್ರಗ್ಸ್ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸಬೇಕು. ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಸಚಿವ ಡಾ.ನಾರಾಯಣಗೌಡ ಕರೆ ನೀಡಿದರು.