ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ವಸತಿ ಸಚಿವ ವಿ. ಸೋಮಣ್ಣ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿದೆ.
ಸಚಿವ ಸೋಮಣ್ಣ ವಿರುದ್ಧದ ಆರೋಪ ಸಂಬಂಧ ಹೈಕೋರ್ಟ್ ನಿರ್ದೇಶನದ ಮೇರೆ ಮರು ವಿಚಾರಣೆ ಪ್ರಾರಂಭಿಸಿರುವ ವಿಶೇಷ ನ್ಯಾಯಾಲಯ, ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಮುಂದಿನ ಎರಡು ತಿಂಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ: ನಗರದ ರಾಮಕೃಷ್ಣ ಎಂಬುವವರು 2012ರಲ್ಲಿ ಸೋಮಣ್ಣ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿ ತನಿಖೆ ನಡೆಸುವಂತೆ ಕೋರಿದ್ದರು. ಈ ಸಂಬಂಧ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಆರೋಪದಲ್ಲಿ ಹುರಳಿಲ್ಲ ಎಂದು ತಿಳಿಸಿ ಬಿ ರಿಪೋರ್ಟ್ ಸಲ್ಲಿಸಿದ್ದರು.
ಪ್ರಕರಣದ ತನಿಖೆ ಅಸಮರ್ಪಕವಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದ ಲೋಕಾಯುಕ್ತ ನ್ಯಾಯಾಲಯ ಬಿ. ರಿಪೋರ್ಟ್ ಅನ್ನು ರದ್ದುಗೊಳಿಸಿತ್ತು. ಈ ಅಂಶವನ್ನು ದೂರುದಾರ ರಾಮಕೃಷ್ಣ ಅವರು ದಾಖಲೆಗಳೊಂದಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಸೋಮಣ್ಣ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ಸೋಮಣ್ಣ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಸೋಮಣ್ಣ ವಿರುದ್ಧದ ಜಾರಿಯಾಗಿದ್ದ ಸಮನ್ಸ್ ರದ್ದುಪಡಿಸಿತ್ತು. ಜೊತೆಗೆ ಮರು ವಿಚಾರಣೆಗೆ ಸೂಚನೆ ನೀಡಿತ್ತು.
ಇದನ್ನೂ ಓದಿ: ನಾಳೆಯಿಂದ ಮಲೆ ಮಹದೇಶ್ವರ ಮಹಾಕುಂಭಮೇಳ.. ಸಿಎಂ ಯೋಗಿ ಆದಿತ್ಯನಾಥ್ ಭಾಗಿ