ಬೆಂಗಳೂರು: ಬಿಟ್ ಕಾಯಿನ್ ಹಗರಣದ ತನಿಖೆಯನ್ನು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ವಹಿಸಲಾಗಿದೆ. ಈ ಕುರಿತು ದಾಖಲೆಗಳನ್ನು ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಹಾಗೂ ಕಾನೂನು ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ, ಸಹ ಆರೋಪಿಗಳಾದ ಸುನೀಶ್ ಹೆಗ್ಡೆ ಮತ್ತು ಪ್ರಸಿದ್ ಶೆಟ್ಟಿ ಹಾಗೂ ಹೇಮಂತ್ ಮುದ್ದಪ್ಪ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರ ಪರ ವಕೀಲರಿಂದ ವಾದ: ಅರ್ಜಿದಾರ ಪರ ವಕೀಲರು ಹಾಜರಾಗಿ, ಅರ್ಜಿದಾರರ ವಿರುದ್ಧ ವಿವಿಧೆಡೆ ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಆದರೂ ಮತ್ತೆ ಕಾಮನ್ (ಸಾಮಾನ್ಯ) ಎಫ್‌ಐಆರ್ ದಾಖಲಿಸಲಾಗಿದೆ. ಆ ಎಫ್‌ಐಆರ್ ರದ್ದುಪಡಿಸಿದರೆ, ಹೆಚ್ಚಿನ ತನಿಖೆಯ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ತಿಳಿಸಿದರು.
ಸರ್ಕಾರದ ಪರ ಅಡ್ವೊಕೇಟ್ ಜನರಲ್ ತಿಳಿಸಿದ್ದೇನು?: ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಹಾಜರಾಗಿ, ಬಿಟ್ ಕಾಯಿನ್ ಹಗರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗಿದೆ. ಮುಂದಿನ ವಿಚಾರಣೆ ವೇಳೆಗೆ ತನಿಖೆಯ ವರದಿ ಹಾಗೂ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಆ.22ಕ್ಕೆ ವಿಚಾರಣೆ ಮುಂದೂಡಿಕೆ: ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಆ.22ಕ್ಕೆ ಮುಂದೂಡಿತು. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ವಾದದ ಸಾರಾಂಶವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಪಕ್ಷಗಾರರಿಗೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು.
ಪ್ರಕರಣದ ಹಿನ್ನೆಲೆ : ಬಿಟ್ ಕಾಯಿನ್ ಹಗರಣದ ಸಂಬಂಧ 2020ರ ನ.27ರಂದು ಸಿಸಿಬಿ ಇನಸ್ಪೆಕ್ಟರ್ ನೀಡಿದ್ದ ದೂರಿನ ಅನ್ವಯ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ವಂಚನೆ, ಪೋರ್ಜರಿ, ವಂಚನೆ, ಅಪರಾಧಿಕ ಒಳಸಂಚು, ವಸೂಲಿ ಹಾಗೂ ಎಲೆಕ್ಟ್ರಾನಿಕ್ ಡಿವೈಸ್ ಬಳಸಿ ಆಕ್ಷೇಪಾರ್ಹ ಮಾಹಿತಿ ರವಾನಿಸಿರುವುದು ಸೇರಿದಂತೆ ಹಲವು ಆರೋಪಗಳ ಸಂಬಂಧ ದೂರು ದಾಖಲು ಮಾಡಿದ್ದರು. ಬಳಿಕ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು.
2021ರ ಫೆ.22ರಂದು ಸಿಸಿಬಿ ಪೊಲೀಸರು 6 ಆರೋಪಿಗಳ ವಿರುದ್ಧ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದರು. ಈ ಪ್ರಕರಣದಲ್ಲಿ ಶ್ರೀಕಿ ಮೊದಲನೇ ಆರೋಪಿಯಾದರೆ, ಸುನೀಶ್ ಹೆಗ್ಡೆ ಮತ್ತು ಪ್ರಸಿದ್ ಶೆಟ್ಟಿ ಹಾಗೂ ಹೇಮಂತ್ ಮುದ್ದಪ್ಪ ಇತರೆ ಆರೋಪಿಗಳು ಇದ್ದಾರೆ. ಈ ಪ್ರಕರಣವು ಅಧೀನ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಇದರಿಂದ ತಮ್ಮ ವಿರುದ್ಧದ ಎಫ್‌ಐಆರ್, ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಅರ್ಜಿದಾರ ಆರೋಪಿಗಳು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಕ್ಕೆ ಮಾಡಿದ್ದಾರೆ.
ಇದನ್ನೂ ಓದಿ: ಟ್ವಿಟ್ಟರ್ಗೆ ದಂಡ ವಿಧಿಸಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠದಿಂದ ತಡೆ