ಬೆಂಗಳೂರು: ಬಹುಮತದ ಸರ್ಕಾರ ಬಂದಿದೆ ಎಂದಾಕ್ಷಣ ರಾಜ್ಯದ ಜನತೆಯನ್ನು, ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ವಿರುದ್ಧ ಟೀಕಾಪ್ರಹಾರ ನಡೆಸಿರುವ ಹೆಚ್ಡಿಕೆ, ತಕ್ಷಣವೇ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಆಡಿ, ಕನ್ನಡಿಗರ ತಲೆ ಮೇಲೆ ಮಕ್ಮಲ್ ಟೋಪಿ ಇಟ್ಟ ಕಾಂಗ್ರೆಸ್, ಈಗ I.N.D.I.A.ಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತವನ್ನೇ ಬಲಿದಾನ ಮಾಡಿದೆ. ಅಂದುಕೊಂಡಿದ್ದೇ ಆಗಿದ್ದು, ನಮ್ಮ ಭಯ ನಿಜವಾಗಿದೆ. ಕಾಂಗ್ರೆಸ್ ಸರಕಾರ ಕನ್ನಡಿಗರಿಗೆ, ಅದರಲ್ಲೂ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ ಎಂದು ಅವರು ಕಿಡಿ ಕಾರಿದ್ದಾರೆ.
ಮಳೆ ಅಭಾವದಿಂದ ಜಲಾಶಯಗಳು ತುಂಬಿಲ್ಲ. ರೈತರ ಬೆಳೆಗೆ ನೀರಿಲ್ಲ, ಬೆಂಗಳೂರಿಗೆ ಕುಡಿಯುವ ನೀರಿಗೂ ತತ್ವಾರ. ನಮ್ಮ ಹೊಟ್ಟೆಗೇ ಹಿಟ್ಟಿಲ್ಲ, ನೆರೆಮನೆಯವರ ಜುಟ್ಟಿಗೆ ಮಲ್ಲಿಗೆ ಮುಡಿಸಲು ಹೊರಟಿದೆ ಸರಕಾರ. ಕನ್ನಡಿಗರಿಗೆ ವಂಚಿಸಿ ರಾಜಾರೋಷವಾಗಿ ನೀರು ಹರಿಸುವ ಮೂಲಕ ತಮಿಳುನಾಡು ಜತೆ ರಾಜಕೀಯ ಚೌಕಾಬಾರ ಆಡುತ್ತಿದೆ! ಇದೇನು ಇನ್ನೊಂದು ಗ್ಯಾರಂಟಿನಾ? ಎಂದು ಅವರು ಪ್ರಶ್ನಿಸಿದ್ದಾರೆ.
2024ರ ಲೋಕಸಭೆ ಚುನಾವಣೆ ಗೆಲುವಿಗೆ ಕಾವೇರಿ ಹಿತವನ್ನು ನೆರೆರಾಜ್ಯಕ್ಕೆ ಅಡವಿಟ್ಟಿದೆ ಹಸ್ತಪಕ್ಷದ ಸರಕಾರ! ತಮಿಳುನಾಡಿಗೆ ಬೆದರಿ ಶರಣಾಗಿದೆ!! ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಸಭೆಯಿಂದಲೇ ಹೊರನಡೆದ, ರಾಜ್ಯದ ವಿರುದ್ಧ ಸುಪ್ರೀಂ ಕೋರ್ಟ್ಗೆ ಅರ್ಜಿ ಹಾಕಿದ ರಾಜ್ಯದೆದುರು ದೈನೇಸಿಯಾಗಿ ಮಂಡಿಯೂರಿದ್ದು, ಕನ್ನಡಿಗರ ಸ್ವಾಭಿಮಾನಕ್ಕೆ ಕೊಟ್ಟ ಕೊಡಲಿಪೆಟ್ಟು ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಹೆಚ್ ಡಿ ದೇವೇಗೌಡರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆ ರಾಜ್ಯ ಸುಪ್ರೀಂ ಕೋರ್ಟ್ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ ಎಂದು ಅವರು ಹೇಳಿದ್ದಾರೆ.
ಸಂಕಷ್ಟ ಸ್ಥಿತಿಯ ಬಗ್ಗೆ ರಾಜ್ಯ ಕಾಂಗ್ರೆಸ್ ಸರಕಾರ ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡಲಿಲ್ಲ, ಯಾಕೆ? ಕಾನೂನು ತಜ್ಞರ ಜತೆ, ಪ್ರತಿಪಕ್ಷ ಮುಖಂಡರ ಜತೆ ಸಮಾಲೋಚನೆ ನಡೆಸದೇ ವಾಯುವೇಗದಲ್ಲಿ ತಮಿಳುನಾಡಿಗೆ ನೀರು ಹರಿಸಿದ ಒಳಗುಟ್ಟೇನು? ಜನತೆಗೆ ಗೊತ್ತಾಗಬೇಕಿದೆ ಎಂದು ಅವರು ತಿಳಿಸಿದ್ದಾರೆ.
ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿಯೊಬ್ಬರು, ತಾವು ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ? ಅವರು ಸ್ಪಷ್ಟಪಡಿಸಬೇಕಿದೆ. ಕಾವೇರಿ ಕೀಲಿ ಕೇಂದ್ರ ಬಳಿ ಇದೆ ಎಂದಾದರೆ ಇವರ ಹೊಣೆ ಏನು? ಆ ಕೀಲಿ ಈಗ ಸ್ಟಾಲಿನ್ ಅವರ ಕೈಯ್ಯಲ್ಲಿದೆಯೋ ಅಥವಾ ಸೋನಿಯಾ ಗಾಂಧಿ ಅವರ ಕೈಯ್ಯಲ್ಲಿದೆಯೋ? ಎಂದು ಮಾಜಿ ಮುಖ್ಯಮಂತ್ರಿ ಅವರು ಕೇಳಿದ್ದಾರೆ.
ತಾಕತ್ತಿದ್ದರೆ ಕೋರ್ಟಿಗೆ ಹೋಗಿ ಎಂದು ರೈತರಿಗೆ ಉಪ ಮುಖ್ಯಮಂತ್ರಿಗಳು ಹೇಳಿರುವುದು ದರ್ಪ, ದುರಹಂಕಾರದ ಪರಾಕಾಷ್ಠೆ. ನಿತ್ಯವೂ ಸಾವಿರಾರು ಕ್ಯೂಸೆಕ್ ಕಾವೇರಿ ನೀರು ನೆರೆರಾಜ್ಯಕ್ಕೆ ಹರಿದು ಹೋಗುತ್ತಿದೆ. ಇನ್ನೂ 10 ಟಿಎಂಸಿ ಬಿಡುತ್ತೇವೆ ಎಂದು ಅವರು ಹೇಳಿರುವುದು ಸರಿಯಲ್ಲ? ಎಂದಿದ್ದಾರೆ.
ಕನ್ನಡಿಗರು ಕೊಟ್ಟ ಪೆನ್ ಈಗ ಗನ್ ರೂಪ ತಳೆದಿದೆಯಾ ಹೇಗೆ? ಕನ್ನಡಿಗರನ್ನು ಕೇಳಿಕೇಳಿ ಪಡೆದುಕೊಂಡ ಪೆನ್ ಈಗ ಪೆಚ್ಚಗೆ, ತೆಪ್ಪಗೆ ಮಲಗಿದೆಯಾ? ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರವೇ ರಾಜ್ಯದ ಜಲ ಸಂಕಷ್ಟದ ಬಗ್ಗೆ ಸಭೆಯಲ್ಲೇ ಅಂಕಿ - ಅಂಶ ಸಮೇತ ಹೇಳಿದೆ. ಪಾಪ.. ಜಲ ಸಂಪನ್ಮೂಲ ಸಚಿವರಿಗೆ ಈ ಬಗ್ಗೆ ಮಾಹಿತಿ ಇಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.
ಕಾವೇರಿ ವಿಷಯದಲ್ಲಿ ಕಾಂಗ್ರೆಸ್ಸಿನದು ಸದಾ ಎರಡು ನಾಲಿಗೆ! ಕಾವೇರಿ ಪಾಲಿಗೆ ಆ ಪಕ್ಷ ನಯವಂಚನೆ, ನಂಬಿಕೆ ದ್ರೋಹದ ಪ್ರತೀಕ. ಅಧಿಕಾರಕ್ಕೆ ಬಂದು 100 ದಿನ ಕಳೆಯುವ ಮುನ್ನವೇ ಕೊಳ್ಳಿ ಇಡುವ ಕೆಲಸ ಮಾಡಿಬಿಟ್ಟಿದೆ. ಈ ಅನ್ಯಾಯ ಸಹಿಸುವ ಪ್ರಶ್ನೆಯೇ ಇಲ್ಲ. ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ಸಂಕಷ್ಟಸೂತ್ರದ ಪಾಲನೆಗೆ ಒತ್ತಡ ಹೇರಬೇಕು ಹಾಗೂ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಪಕ್ಷ ಸಭೆ ಕರೆಯಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.
ತಮಿಳುನಾಡಿಗೆ ನೀರು ಹರಿಸದಂತೆ ಕುರುಬೂರು ಶಾಂತಕುಮಾರ್ ಒತ್ತಾಯ- ಮೈಸೂರು: ರಾಜ್ಯದ ರೈತರ ಹಿತಾಸಕ್ತಿ ಬಲಿಕೊಟ್ಟು ನದಿ ಮೂಲಕ ತಮಿಳುನಾಡಿಗೆ ನೀರು ಹರಿಸುವುದು ರೈತದ್ರೋಹಿ ಕಾರ್ಯವಾಗಿದೆ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ. ಕಾವೇರಿ ಅಚ್ಚುಕಟ್ಟು ಭಾಗದ ನಾಲೆಗಳಿಗೆ ಬೆಳೆ ಬೆಳೆಯಲು ಸಂಪೂರ್ಣವಾಗಿ ನೀರು ಹರಿಸಬೇಕೆಂದು ಒತ್ತಾಯಿಸಿ ಮೈಸೂರಿನಲ್ಲಿ ಆಗಸ್ಟ್ 14ರಂದು ಪ್ರತಿಭಟನೆ ಮಾಡಿದ ಅದೇ ದಿನ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ಕರೆದಿದ್ದರು. ಸಭೆಯಲ್ಲಿ ನಾವು ತಮಿಳುನಾಡಿಗೆ ಬಿಡುವ ಬದಲು ರಾಜ್ಯದ ರೈತರ ಹಿತಾಸಕ್ತಿ ಕಾಪಾಡಿ ಎಂದು ವಿರೋಧ ವ್ಯಕ್ತಪಡಿಸಿದ್ದೇವೆ ಎಂದಿದ್ದಾರೆ.
ನಮ್ಮ ರೈತರ ಬಲಿಕೊಟ್ಟು ತಮಿಳುನಾಡಿಗೆ ನೀರು ಬಿಡುವುದು ಸರಿಯಲ್ಲ. ಕೂಡಲೇ ಕಾವೇರಿ ಅಚ್ಚುಕಟ್ಟು ಭಾಗದ ನಾಲೆಗಳಿಗೆ ಬೆಳೆ ಬೆಳೆಯಲು ನೀರು ಹರಿಸಬೇಕು. ಸರ್ಕಾರ ನಾಟಕೀಯವಾಗಿ ವರ್ತಿಸದೆ ರಾಜ್ಯದ ರೈತರ ಹಿತ ಕಾಪಾಡಬೇಕು. ಮಳೆ ಪ್ರಮಾಣ ಕಡಿಮೆಯಾಗಿರುವ ಬಗ್ಗೆ ಕಾವೇರಿ ಪ್ರಾಧಿಕಾರಕ್ಕೆ ಮನವಿ ಮಾಡಿ, ರಾಜ್ಯದ ರೈತರ ಹಿತಾಸಕ್ತಿ ಕಾಪಾಡಬೇಕು ಎಂದು ಒತ್ತಾಯಿಸಿದ್ದೇವೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳು ಒಂದು ರೀತಿ ಹೇಳಿಕೆ ಕೊಡುವುದು, ನೀರಾವರಿ ಸಚಿವರು ಮತ್ತೊಂದು ರೀತಿ ನಡೆದುಕೊಳ್ಳುವುದು ನಾಟಕೀಯ ವರ್ತನೆ. ಕೂಡಲೇ ನೀರು ಹರಿಸುವುದನ್ನು ನಿಲ್ಲಿಸಿ ಕಾವೇರಿ ಎಲ್ಲ ನಾಲೆಗಳಿಗೂ ಬೆಳೆ ಬೆಳೆಯಲು ನೀರುಹರಿಸುವ ನಿರ್ಧಾರ ಕೈಗೊಳ್ಳಿ. ಕಟ್ಟು ನೀರು ಪದ್ಧತಿ ಬೇಕಾಗಿಲ್ಲ, ವರ್ಷಕ್ಕೆ ಒಂದೇ ಬೆಳೆ ಬೆಳೆಯಲು ಈ ಭಾಗದಲ್ಲಿ ಅವಕಾಶವಿರುವುದು. ಅದನ್ನು ತಪ್ಪಿಸುವ ಕಾರ್ಯ ಸರ್ಕಾರ ಮಾಡಬಾರದು. ಕೂಡಲೇ ರಾಜ್ಯದ ರೈತರ ಹಿತಾಸಕ್ತಿ ಕಾಪಾಡಬೇಕು. ಇಲ್ಲದಿದ್ದರೆ ಕಾವೇರಿ ಅಚ್ಚು ಕಟ್ಟು ಭಾಗದ ರೈತರು ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇಂಥ ಸಂಕಷ್ಟ ಕಾಲದ ವೇಳೆಯಲ್ಲಿ ತಮಿಳುನಾಡಿಗೆ, ಮೇಕೆದಾಟು ನಿರ್ಮಾಣದ ಅವಶ್ಯಕತೆ ಬಗ್ಗೆ ಹೇಳಬೇಕು. ಅವರ ಮನವೊಲಿಸಿ ಸಮುದ್ರಕ್ಕೆ ಹೆಚ್ಚುವರಿಯಾಗಿ ಹರಿಯುವ ನೀರನ್ನು ಉಳಿಸುವ ಬುದ್ಧಿವಂತಿಕೆಯನ್ನು ನೀರಾವರಿ ಸಚಿವ ಡಿ ಕೆ ಶಿವಕುಮಾರ್ ತೋರಿಸಬೇಕು ಎಂದು ಕುರುಬೂರು ಶಾಂತಕುಮಾರ್ ಅವರು ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: Bommai: ತಮಿಳುನಾಡು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಹಾಕಿದ ತಕ್ಷಣ ಕಾವೇರಿ ನೀರು ಬಿಟ್ಟಿರುವುದು ಅಕ್ಷಮ್ಯ ಅಪರಾಧ- ಬೊಮ್ಮಾಯಿ