ಬೆಂಗಳೂರು : 15 ವಿಧಾನಸಭಾ ಕ್ಷೇತ್ರಗಳ ಉಪಚುನಾಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ರಾಜ್ಯ ಮುಂಚೂಣಿ ಘಟಕಗಳ ಅಧ್ಯಕ್ಷರ ಜೊತೆ ಸಭೆ ನಡೆಸಿದರು.
ಕೆಪಿಸಿಸಿ ಕಚೇರಿಯಲ್ಲಿ ಸುಮಾರು 2 ಗಂಟೆಗಳ ಕಾಲ ಸಭೆ ನಡಿಸಿದ ಈಶ್ವರ್ ಖಂಡ್ರೆ, ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಹಾಗೂ ತಳ ಮಟ್ಟದಲ್ಲಿ ಪಕ್ಷ ಸಂಘಟನೆಯ ಬಗ್ಗೆ ಚರ್ಚೆ ನಡೆಸಿದರು. ಸಭೆ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 15 ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದ್ದು, ನ.12 ರಂದು ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆ ಪ್ರದೇಶ ಕಾಂಗ್ರೆಸ್ ವತಿಯಿಂದ ರಾಜ್ಯಮಟ್ಟದ ಮುಂಚೂಣಿ ಘಟಕಗಳ ಅಧ್ಯಕ್ಷರ ಜೊತೆ ಸಭೆ ನಡೆಸಿ ಚುನಾವಣಾ ಪೂರ್ವ ಸಿದ್ದತೆಗಳ ಬಗ್ಗೆ ಚರ್ಚಿಸಿದ್ದೇನೆ ಎಂದು ತಿಳಿಸಿದರು.
ಅಲ್ಲದೆ, ಕಳೆದ ಆಗಸ್ಟ್ ನಲ್ಲಿ ಭೀಕರ ಮಳೆಗೆ ತತ್ತರಿಸಿರುವ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಸ್ಥಳೀಯ ನಾಯಕರು ಸ್ಪಂದಿಸಬೇಕು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ನೆರೆ ಸಂತ್ರಸ್ತರ ವಿಚಾರದಲ್ಲಿ ಸಂಪೂರ್ಣ ವಿಫಲವಾಗಿದೆ. ಈ ವಿಚಾರವಾಗಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಸಂತ್ರಸ್ತರಿಗೆ ಹೋರಾಟ ಮಾಡಿ ಪರಿಹಾರ ಕೊಡಿಸುವ ವಿಚಾರವಾಗಿ ಸಭೆಯಲ್ಲಿ ಚರ್ಚಿಸಲಾಯಿತು ಎಂದರು.