ಬೆಂಗಳೂರು: ಕೇಂದ್ರ ಜಲ ಜೀವನ್ ಮಿಷನ್ ಯೋಜನೆಯ ಅನುಷ್ಠಾನದ ಕುರಿತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿದರು.
ಜಲ ಜೀವನ್ ಮಿಷನ್ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ 50:50ರಷ್ಟು ಅನುದಾನದೊಂದಿಗೆ ಜಾರಿಗೊಳಿಸಲಾಗುತ್ತಿದ್ದು, ರಾಜ್ಯಕ್ಕೆ 1,150 ಕೋಟಿ ರೂ. ಅನುದಾನ ಮಂಜೂರಾಗಿದೆ. ರಾಜ್ಯದಲ್ಲಿ 15 ಲಕ್ಷ ಕುಟುಂಬಗಳಿಗೆ ನಲ್ಲಿ ನೀರು ಸಂಪರ್ಕ ಜೋಡಿಸುವ ಗುರಿ ಇರಿಸಿಕೊಳ್ಳಲಾಗಿದೆ. ಮುಂದಿನ ಮೂರು ವರ್ಷದಲ್ಲಿ ಇದನ್ನು ಸಾಧಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಗಜೇಂದ್ರ ಸಿಂಗ್ ಶೇಖಾವತ್ ಮಾತನಾಡಿ, ಜಲ ಶಕ್ತಿ ಮಿಷನ್ ಯೋಜನೆಗೆ ಅನುದಾನದ ಕೊರತೆ ಇಲ್ಲ. ಉದ್ಯೋಗ ಖಾತರಿ ಯೋಜನೆ ಮತ್ತು 15ನೇ ಹಣಕಾಸು ಆಯೋಗದ ಅನುದಾನವನ್ನೂ ಸಂಯೋಜಿಸಿ, 2022-23ರ ಒಳಗೆ ರಾಜ್ಯದಾದ್ಯಂತ ಈ ಯೋಜನೆ ಜಾರಿಗೊಳಿಸುವಂತೆ ಸಲಹೆ ನೀಡಿದರು. ಆರಂಭದಲ್ಲಿ ಈಗಾಗಲೇ ಜಲ ಮೂಲ ಲಭ್ಯವಿರುವ, ಗ್ರಾಮಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸುವ ಕುರಿತು ತೀರ್ಮಾನಿಸಲಾಯಿತು.
ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಭಾಗವಹಿಸಿದ್ದರು.