ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಡಾ. ಫಾರೂಕ್ ಅಬ್ದುಲ್ಲಾ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದು, ಹಾಗು ಮತ್ತೊಮ್ಮೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಅಧಿಕಾರ ವಹಿಸಿಕೊಂಡಿದ್ದಕ್ಕೆ ಫಾರೂಕ್ ಸಂತಸ ವ್ಯಕ್ತಪಡಿಸಿದ್ದಾರೆ.
ದೇಶದಿಂದಲೇ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರ ಇಡುವ ಸಾಕಷ್ಟು ಪ್ರಯತ್ನವನ್ನು ಬಿಜೆಪಿ ಮಾಡುತ್ತಿದ್ದು, ಅವರ ಎಲ್ಲಾ ವಿಧದ ಪ್ರಯತ್ನವನ್ನು ಹಿಂದಿಕ್ಕಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಯಾಗಿದೆ. ಇಡೀ ದೇಶದಲ್ಲಿ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಇದಕ್ಕೆ ಕರ್ನಾಟಕವೇ ಹೆಬ್ಬಾಗಿಲು ಆಗಲಿದೆ ಎಂಬ ವಿಶ್ವಾಸವನ್ನು ಈ ಭೇಟಿ ಸಂದರ್ಭ ಅವರು ವ್ಯಕ್ತಪಡಿಸಿದ್ದಾರೆ. ಈ ವೇಳೆ ಸಚಿವ ಜಮೀರ್ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹಮದ್, ಗೋವಿಂದರಾಜು ಉಪಸ್ಥಿತರಿದ್ದರು.
![ಫಾರುಕ್ ಅಬ್ದುಲ್ಲಾ ಭೇಟಿ, ಅಭಿನಂದನೆ](https://etvbharatimages.akamaized.net/etvbharat/prod-images/18697451_thumb.jpg)
ಜಾತಿ ಜನಗಣತಿ ಸಮೀಕ್ಷೆ ದತ್ತಾಂಶ ಆಧರಿಸಿ ಸಮುದಾಯಗಳಿಗೆ ಅನುಕೂಲ : ಹಿಂದಿನ ಬಾರಿ ತಮ್ಮ ಸರ್ಕಾರದ ಅವಧಿಯಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಹಮ್ಮಿಕೊಳ್ಳಲಾಗಿತ್ತು. ಇದೀಗ ಈ ಸಮೀಕ್ಷೆಗಳ ವರದಿಯನ್ನು ಸ್ವೀಕರಿಸಿ, ಅದರ ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಇಂದು ಕರ್ನಾಟಕ ಶೋಷಿತ ವರ್ಗಗಳ ಮಹಾ ಒಕ್ಕೂಟದ ನಿಯೋಗವನ್ನು ಭೇಟಿ ಮಾಡಿ ಮಾತನಾಡಿದ ಅವರು, ಜಾತಿವಾರು ಸಮೀಕ್ಷೆಯಿಂದ ಜನರಿಗೆ ಒದಗಿಸಬೇಕಾದ ಸೌಲಭ್ಯಗಳು, (ಆದ್ಯತೆಯ ಚಿಕಿತ್ಸೆ) ಮೊದಲಾದ ಅಂಶಗಳ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಅಗತ್ಯವಿರುವ ದತ್ತಾಂಶ ಲಭ್ಯವಾಗುವುದು. ಮೀಸಲಾತಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ವೈಜ್ಞಾನಿಕ ಹಾಗೂ ನಿಖರ ಮಾಹಿತಿ ಅತಿ ಅಗತ್ಯ. ಈ ಉದ್ದೇಶದಿಂದ ಜಾತಿವಾರು ಸಮೀಕ್ಷೆಯನ್ನು ನಡೆಸಲಾಗಿತ್ತು. ಈಗ ವರದಿಯನ್ನು ಸ್ವೀಕರಿಸಿ, ಅದರಲ್ಲಿನ ದತ್ತಾಂಶಗಳ ಆಧಾರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
![ಕರ್ನಾಟಕ ಶೋಷಿತ ವರ್ಗಗಳ ಮಹಾ ಒಕ್ಕೂಟದ ನಿಯೋಗವನ್ನು ಭೇಟಿ ಮಾಡಿದ ಸಿದ್ದರಾಮಯ್ಯ](https://etvbharatimages.akamaized.net/etvbharat/prod-images/18697451_thumb4.jpg)
ಬಿಜೆಪಿ ಸರ್ಕಾರವು ಈ ಹಿಂದೆ ಮೀಸಲಾತಿಯಲ್ಲಿ ಸೃಷ್ಟಿಸಿದ ಗೊಂದಲ ನಿವಾರಣೆ ಮಾಡಲಾಗುವುದು. ಇಲ್ಲವಾದರೆ ಯಾರಿಗೂ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಾಗದು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ಒಕ್ಕೂಟದ ಮುಖಂಡರಾದ ಕೆ. ಎಂ. ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಮಾವಳ್ಳಿ ಶಂಕರ್, ಪ್ರೊ. ರವಿ ವರ್ಮಕುಮಾರ್, ಅನಂತ್ ನಾಯಕ್, ಡಾ. ನರಸಿಂಹಯ್ಯ, ಪ್ರೊ. ಜಾಫೆಟ್, ಬಿ. ಟಿ. ಲಲಿತಾ ನಾಯಕ್, ಜಿ. ಎಸ್. ಪಾಟೀಲ್ ಸೇರಿದಂತೆ 150ಕ್ಕೂ ಹೆಚ್ಚು ಮಂದಿ ನಾನಾ ಜಾತಿಗಳ ಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.
ರೈತ ವಿರೋಧಿ ಕಾಯ್ದೆಗಳ ಮರುಪರಿಶೀಲನೆ : ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಹಾಗೂ ಜಾನುವಾರು ಹತ್ಯೆ ಕಾಯ್ದೆ ತಿದ್ದುಪಡಿ ಮೊದಲಾದವುಗಳ ಮರುಪರಿಶೀಲನೆ ಮಾಡುವುದಾಗಿ ಸಿದ್ದರಾಮಯ್ಯ ಹೇಳಿದರು. ಇಂದು ತಮ್ಮನ್ನು ಭೇಟಿ ಮಾಡಿದ ವಿವಿಧ ರೈತ ಮುಖಂಡರ ಜೊತೆ ಮಾತುಕತೆ ನಡೆಸಿದರು.
ಕೇಂದ್ರ ಸರ್ಕಾರವು ಕಾರ್ಪೊರೇಟ್ ಕೃಷಿಯನ್ನು ಪರಿಚಯಿಸುವುದರಿಂದ ಶೇ. 85 ಕ್ಕೂ ಹೆಚ್ಚಿನ ಪ್ರಮಾಣದಲ್ಲಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ತೊಂದರೆಯಾಗಲಿದೆ ಎಂದು ರೈತ ಮುಖಂಡರು ಆತಂಕ ವ್ಯಕ್ತಪಡಿಸಿದರು. ಹೀಗಾಗಿ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಿರುವ ನೀತಿ, ನಿಯಮಾವಳಿಗಳ ಕುರಿತು ವಿವರವಾಗಿ ಪ್ರತ್ಯೇಕವಾಗಿ ಚರ್ಚಿಸಲು ಪ್ರತ್ಯೇಕ ಸಭೆ ನಡೆಸುವುದಾಗಿ ಸಿದ್ದರಾಮಯ್ಯ ತಿಳಿಸಿದರು.
ಇದನ್ನೂ ಓದಿ : ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಕುರಿತ ಹೇಳಿಕೆ ವೈರಲ್: ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ