ಬೆಂಗಳೂರು: ಆಗಸ್ಟ್ 20 ರಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನ ಹಿನ್ನೆಲೆಯಲ್ಲಿ ಅಂದು ಜನಧ್ವನಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಅಂದು ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಸರ್ಕಾರದ ಕೊರೊನಾ ಭ್ರಷ್ಟಾಚಾರ, ಭೂಸ್ವಾಧೀನ ಕಾಯ್ದೆ, ಕಾರ್ಮಿಕರ ಕಾಯ್ದೆ, ಎಪಿಎಂಸಿ ಕಾಯ್ದೆಗಳ ತಿದ್ದುಪಡಿಯನ್ನು ವಿರೋಧಿಸಿ ಜನಧ್ವನಿ ಎಂಬ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮದ ವಿವರ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜೀವ್ಗಾಂದಿ ಹಾಗೂ ದೇವರಾಜ್ ಅರಸು ಅವರ ಜನ್ಮದಿನ ಒಂದೇ ದಿನ ಬಂದಿದ್ದು, ಇದು ಪವಿತ್ರ ದಿನವಾಗಿದೆ. ಅಂದು ಜನಧ್ವನಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಇದು ಜನರ ಧ್ವನಿಯ ದಿನವಾಗಿದೆ. ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು, ಮಾಜಿ ಸಂಸದರು, ಮಾಜಿ ಶಾಸಕರು, ಕಾಂಗ್ರೆಸ್ ಮುಖಂಡರು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಕಳೆದ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಆಗಿದ್ದವರು, ಸಮಿತಿಯ ಅಧ್ಯಕ್ಷರು, ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯಿತಿ ಸದಸ್ಯರು, ಪಾಲಿಕೆ ಸದಸ್ಯರು ಎಲ್ಲರೂ ಸೇರಿ, ಪಕ್ಷದ ವಿವಿಧ ಸಂಘಟನೆಯ ಪದಾಧಿಕಾರಿಗಳು ಸೇರಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕರೆ ಕೊಟ್ಟಿದ್ದಾರೆ.
ಕಾರ್ಯಕ್ರಮ ಮುಗಿದ ಮೇಲೆ ತಹಶೀಲ್ದಾರ್, ಜಿಲ್ಲಾಧಿಕಾರಿ, ವಾರ್ಡ್ ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ತಲುಪಿಸುವಂತೆ ಅರ್ಜಿ ನೀಡಿ, ರಾಜ್ಯದಲ್ಲಿ ನಡೆಯುತ್ತಿರುವ ಸರ್ಕಾರದ ಜನ ವಿರೋಧಿ ನೀತಿಯ ವಿವರ ನೀಡಬೇಕು. ಈ ಮೂಲಕ ಜನರ ಪರ ಧ್ವನಿ ಎತ್ತಬೇಕು ಎಂದು ತಿಳಿಸಿದ್ದಾರೆ.