ಬೆಂಗಳೂರು: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಸಂಬಂಧ ಚರ್ಚಿಸಲು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಾಳೆ ಮಧ್ಯಾಹ್ನ ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಸಭೆ ನಡೆಯಲಿದೆ.
ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರಿಗೆ ಆಹ್ವಾನ ನೀಡಲಾಗಿದ್ದು, ರಾಜ್ಯಸಭೆ ಹಾಗೂ ವಿಧಾನ ಪರಿಷತ್ಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಚರ್ಚೆ ನಡೆಯಲಿದೆ. ಅದೇ ರೀತಿ ರಾಜ್ಯಸಭೆಗೆ ಸ್ಪರ್ಧಿಸುವಂತೆ ದೇವೇಗೌಡರ ಮೇಲೆ ಪಕ್ಷದ ಮುಖಂಡರು ಒತ್ತಡ ಹಾಗೂ ಎರಡೂ ಚುನಾವಣೆಗಳಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಬೇಕೇ, ಬೇಡವೇ ಎಂಬುದರ ಬಗ್ಗೆಯೂ ಮಹತ್ವದ ಚರ್ಚೆ ನಡೆಯಲಿದೆ.
ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕಾರ್ಯ ಜೂನ್ 2ರಿಂದಲೇ ಆರಂಭವಾಗಿದ್ದು, ನಾಳೆಯೇ ಅಭ್ಯರ್ಥಿಯ ಬಗ್ಗೆ ಅಂತಿಮ ನಿರ್ಧಾರವಾಗಲಿದೆ ಎಂದು ಹೇಳಲಾಗುತ್ತಿದೆ. ಇನ್ನು ಪರಿಷತ್ ಚುನಾವಣೆಗೆ ಪಕ್ಷದಲ್ಲಿ ಆಕಾಂಕ್ಷಿಗಳ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಶಾಸಕರ ಅಭಿಪ್ರಾಯ ಪಡೆದು ಜೆಡಿಎಸ್ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ವಿಧಾನಸಭೆಯಿಂದ ವಿಧಾನ ಪರಿಷತ್ನ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಮರು ಆಯ್ಕೆ ಬಯಸಿದ್ದು, ಇದೇ ಸ್ಥಾನಕ್ಕೆ ಇನ್ನೂ ಹಲವು ಮುಖಂಡರು ಆಕಾಂಕ್ಷಿಗಳಿದ್ದಾರೆ. ಒಟ್ಟಾರೆ ನಾಳಿನ ಜೆಡಿಎಲ್ಪಿ ಸಭೆ ಭಾರೀ ಕುತೂಹಲ ಮೂಡಿಸಿದೆ.