ಬೆಂಗಳೂರು: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಚಿವ ಸಿ.ಎಂ.ಉದಾಸಿ ಅವರು ಕಳೆದ ವಾರ ಅನಾರೋಗ್ಯದಿಂದ ನಿಧನರಾದ ಹಿನ್ನೆಲೆ ತೆರವಾಗಿರುವ ಈ ಕ್ಷೇತ್ರಕ್ಕೆ ಉಪಚುನಾವಣೆ ಸದ್ಯದಲ್ಲೇ ನಡೆಯಲಿದ್ದು, ಈಗಲೇ ತಮ್ಮ ಅಭ್ಯರ್ಥಿಯನ್ನು ಜೆಡಿಎಸ್ ಘೋಷಿಸಿದೆ. ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಿಯಾಜ್ ಶೇಖ್ ಎಂಬುವರನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ.
ನಿಯಾಜ್ ಶೇಖ್ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಪಕ್ಷದ ಬಾವುಟ ನೀಡಿ ನಿಯಾಜ್ ಶೇಖ್ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಯ್ಯದ್ ಅಲ್ತಾಫ್ ಮತ್ತಿತರರು ಉಪಸ್ಥಿತರಿದ್ದರು. ನಿಯಾಜ್ ಶೇಖ್ ಅವರು ಹಾವೇರಿ ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಕ್ಷೇತ್ರದಲ್ಲಿ ಒಳ್ಳೆಯ ಹೆಸರು ಗಳಿಸಿರುವ ಅವರು, ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಇನ್ನೂ ಹಾನಗಲ್ ಕ್ಷೇತ್ರಕ್ಕೆ ಉಪ ಚುನಾವಣೆಯೇ ಘೋಷಣೆಯಾಗಿಲ್ಲ. ಇನ್ನು ಎರಡು ರಾಷ್ಟ್ರೀಯ ಪಕ್ಷಗಳು ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸುವ ಮೊದಲೇ ಜೆಡಿಎಸ್‍ನಿಂದ ನಿಯಾಜ್ ಶೇಖ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿರುವುದು ಕುತೂಹಲ ಮೂಡಿಸಿದೆ.