ಬೆಂಗಳೂರು: ಪಕ್ಷವನ್ನು ಗ್ರಾಮಮಟ್ಟದಿಂದ ರಾಜ್ಯಮಟ್ಟದವರಗೆ ಪರಿಣಾಮಕಾರಿಯಾಗಿ ಬಲಗೊಳಿಸುವ ನಿಟ್ಟಿನಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರುಗಳನ್ನು ಕರೆದು ಮುಂದಿನ ಹೋರಾಟದ ರೂಪುರೇಷೆ ತಯಾರಿಸಬೇಕು. ಇದೇ ಉದ್ದೇಶದಿಂದ ಜನವರಿ 23ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೆಡಿಎಸ್ ಸಮಾವೇಶ ಆಯೋಜಿಸಲಾಗಿದೆ.
ಅರಮನೆ ಮೈದಾನದ ಶೃಂಗಾರ್ ಪ್ಯಾಲೇಸ್ ನಲ್ಲಿ ಜನವರಿ 23ರಂದು ಬೆಳಗ್ಗೆ 11ಗಂಟೆಗೆ ನಡೆಯಲಿರುವ ಸಮಾವೇಶದ ಉದ್ಘಾಟನೆಯನ್ನು ಮಾಜಿ ಪ್ರಧಾನಿ, ಜೆಡಿಎಸ್ ನ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಆಹ್ವಾನ ನೀಡಲಾಗಿದೆ. ಈ ಸಭೆಯಲ್ಲಿ ಪಕ್ಷದ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.
ಸಮಾವೇಶದ ಅಧ್ಯಕ್ಷತೆಯನ್ನು ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ವಹಿಸಲಿದ್ದು, ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ, ಮಾಜಿ, ಹಾಲಿ ರಾಜ್ಯಸಭೆ, ಲೋಕಸಭೆ ಸದಸ್ಯರು, ವಿಧಾನಸಭೆ, ವಿಧಾನಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ. ಜೊತೆಗೆ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಜಿಲ್ಲಾ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತರಾದವರು, ಜಿಲ್ಲಾ ಮಟ್ಟದ ಪದಾಧಿಕಾರಿಗಳು ಹಾಗೂ ಆ ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸುವಂತೆ ಪಕ್ಷ ಆಹ್ವಾನ ನೀಡಿದೆ