ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವುದು ಮತ್ತು ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಇಂದು ಮತ್ತು ನಾಳೆ ಜೆಡಿಎಸ್ ಮಹತ್ವದ ಸಭೆ ನಡೆಯಲಿದೆ.
ಅಭ್ಯರ್ಥಿಗಳ ಆಯ್ಕೆ, ಕಾಂಗ್ರೆಸ್ನೊಂದಿಗೆ ಚುನಾವಣಾ ಪೂರ್ವ ಮೈತ್ರಿ, ಚುನಾವಣೆ ರೂಪುರೇಷ ಕುರಿತಂತೆ ಸಮಾಲೋಚನೆ ನಡೆಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಸಂಜೆ ಖಾಸಗಿ ಹೋಟೆಲ್ನಲ್ಲಿ ಸಭೆ ಕರೆದಿದ್ದಾರೆ.
ಸಭೆಯಲ್ಲಿ ಸಚಿವರು, ಶಾಸಕರು ಹಾಗೂ ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದು, ಕಾಂಗ್ರೆಸ್ನೊಂದಿಗಿನ ಚುನಾವಣಾ ಪೂರ್ವ ಮೈತ್ರಿ ಕುರಿತಂತೆ ಸೀಟು ಹಂಚಿಕೆ ಇನ್ನೂ ಅಂತಿಮವಾಗದ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ಸಭೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದು, ಲೋಕಸಭೆ ಚುನಾವಣೆಯಲ್ಲೂ ಉಭಯ ಪಕ್ಷಗಳ ನಡುವೆ ಮೈತ್ರಿ ಮುಂದುವರೆಸಲು ನಿರ್ಧರಿಸಲಾಗಿದೆ. ಕಾಂಗ್ರೆಸ್-ಜೆಡಿಎಸ್ ನಡುವೆ ಕ್ಷೇತ್ರದ ಹಂಚಿಕೆ ಇನ್ನೂ ಪೂರ್ಣವಾಗದಿರುವ ಹಿನ್ನೆಲೆಯಲ್ಲಿ ಯಾವ ರೀತಿ ಚುನಾಣೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಯಾವ ಕ್ಷೇತ್ರಕ್ಕೆ ಆದ್ಯತೆ ನೀಡಬೇಕು ಎಂಬ ಬಗ್ಗೆಯೂ ಇಂದು ನಡೆಯಲಿರುವ ಸಭೆಯಲ್ಲಿ ಮಹತ್ವದ ಮಾತುಕತೆ ನಡೆಯಲಿದೆ.
ಇದಲ್ಲದೆ ನಾಳೆ ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಚುನಾವಣಾ ಪೂರ್ವ ಸಿದ್ಧತೆ ಸಭೆ ನಡೆಯಲಿದೆ.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಜಿಲ್ಲಾಧ್ಯಕ್ಷರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ನಾಳೆ ನಡೆಯಲಿರುವ ಸಭೆಯಲ್ಲಿ ಬೆಂಗಳೂರು ಉತ್ತರ, ತುಮಕೂರು, ಮಂಡ್ಯ, ಹಾಸನ, ಮೈಸೂರು, ಉತ್ತರ ಕನ್ನಡ, ವಿಜಯಪುರ ಹಾಗೂ ಶಿವಮೊಗ್ಗ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲಾಗುತ್ತದೆ. ಚುನಾವಣಾ ಕಾರ್ಯತಂತ್ರ ರೂಪಿಸುವ ಬಗ್ಗೆ ನಾಯಕರು ಪಕ್ಷದ ಮುಖಂಡರಿಗೆ ಮಾರ್ಗದರ್ಶನ ಮಾಡಲಿದ್ದಾರೆ. ಈಗಾಗಲೇ ಶಿವಮೊಗ್ಗ, ಹಾಸನ, ಮಂಡ್ಯ ಲೋಕಸಭಾ ಕ್ಷೇತ್ರಗಳೀಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.ಇನ್ನು ಉಳಿದಿರುವ ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಮಾಡುವ ಕುರಿತು ಚರ್ಚೆ ನಡೆಸಲಾಗುತ್ತದೆ.
ಜೆಡಿಎಸ್ ಸ್ಪರ್ಧಿಸುವ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕು. ಅದೇ ರೀತಿ ಕಾಂಗ್ರೆಸ್ಗೆ ಬಿಟ್ಟುಕೊಡುವ ಕ್ಷೇತ್ರಗಳಲ್ಲೂ ಆ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ನೆರವಾಗಬೇಕು. ಒಟ್ಟಾರೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಿ ಮೈತ್ರಿ ಪಕ್ಷಗಳು ಹೆಚ್ಚು ಕ್ಷೇತ್ರಗಳಲ್ಲಿ ಜಯ ಸಾಧಿಸಲು ಯಾವ ರೀತಿ ಕಾರ್ಯತಂತ್ರ ರೂಪಿಸಬೇಕೆಂಬ ಬಗ್ಗೆ ಸಮಾಲೋಚನೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.