ಬೆಂಗಳೂರು: ಕೊರೊನಾ ಹಿನ್ನೆಲೆ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತು ಸ್ಥಿತಿ ಅರಿಯಲು ಸಾಧ್ಯವಾಗದ ಕಾರಣ ವಿಡಿಯೋ ಸಂವಾದದ ಮೂಲಕ ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಹಲವು ಜಿಲ್ಲೆಗಳ ಮುಖಂಡರೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.
ದೇವೇಗೌಡರು ಪದ್ಮನಾಭನಗರದ ನಿವಾಸದಿಂದ ಮತ್ತು ಹೆಚ್.ಡಿ.ಕುಮಾರಸ್ವಾಮಿ ಜೆ.ಪಿ ನಗರದ ತಮ್ಮ ನಿವಾಸದಿಂದ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಪಕ್ಷದ ಕಚೇರಿ ಜೆಪಿ ಭವನದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಡ್ಯ, ಮೈಸೂರು, ಹಾಸನ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಶಾಸಕರು, ತಾಲೂಕು ಅಧ್ಯಕ್ಷರು ಮತ್ತು ಕಳೆದ ಬಾರಿ ಪರಾಜಿತರಾದ ಅಭ್ಯರ್ಥಿಗಳೊಂದಿಗೆ ಚರ್ಚೆ ನಡೆಸಿದರು.
ರಾಜ್ಯದ ಬಹುತೇಕ ಜಿಲ್ಲೆಗಳು ಕಳೆದ ಎರಡು ವರ್ಷಗಳಿಂದ ನೆರೆ ಹಾವಳಿಯಿಂದ ತತ್ತರಿಸಿದ್ದು, ಸರ್ಕಾರವು ನೊಂದವರಿಗೆ ಅಗತ್ಯ ನೆರವು ಹಾಗೂ ಸೌಲಭ್ಯ ಕಲ್ಪಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ವಿಡಿಯೋ ಸಂವಾದ ಏರ್ಪಡಿಸಿ ಚರ್ಚೆ ನಡೆಸಲಾಗಿದೆ.