ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಮೇ. 23ರಂದು ಒಂದು ವರ್ಷ ತುಂಬಲಿದೆ. ಹೀಗಾಗಿ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಾಳೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ನಾಳೆ ಸಂಜೆ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಯಲಿದ್ದು, ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಸೇರಿದಂತೆ ಜೆಡಿಎಸ್ನ ಸಚಿವರುಗಳು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಲೋಕಸಭೆ ಹಾಗೂ ರಾಜ್ಯಸಭಾ ಸದಸ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಪಕ್ಷದಲ್ಲಿನ ಸಣ್ಣಪುಟ್ಟ ಭಿನ್ನಾಭಿಪ್ರಾಯ, ವಿಧಾನಸಭಾ ಕ್ಷೇತ್ರಗಳಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕೆಲಸ ಹಾಗೂ ಮಿತ್ರ ಪಕ್ಷ ಕಾಂಗ್ರೆಸ್ನಲ್ಲಿ ಇರುವ ಅಸಮಾಧಾನದ ಬಗ್ಗೆ ಚರ್ಚಿಸಲಿದ್ದಾರೆ.
ಕನಿಷ್ಠ ಎರಡು ವರ್ಷಗಳ ಕಾಲ ಮೈತ್ರಿ ಸರ್ಕಾರವನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಹಠ ತೊಟ್ಟಿರುವ ಕುಮಾರಸ್ವಾಮಿ, ಜೆಡಿಎಸ್ನ 38 ಹಾಗೂ ಕಾಂಗ್ರೆಸ್ನ 78 ಶಾಸಕರನ್ನು ಒಟ್ಟಾಗಿ ತೆಗೆದುಕೊಂಡು ಹೋಗಲು ತಂತ್ರ ರೂಪಿಸಿದ್ದಾರೆ. ಹೀಗಾಗಿಯೇ ಕಳೆದ ಮೂರು ದಿನಗಳಿಂದ ಭಿನ್ನಮತ ಶಮನಗೊಳಿಸಲು ಕಸರತ್ತು ನಡೆಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಅವರ ಗುಂಪಿನಲ್ಲಿ ಗುರುತಿಸಿಕೊಂಡಿರುವ ಶಾಸಕರನ್ನು ಕರೆಸಿಕೊಂಡು ಮಾತುಕತೆ ನಡೆಸಿ ಅವರ ಮನವೊಲಿಕೆಗೆ ಮುಂದಾಗಿದ್ದು, ಹೇಗಾದರೂ ಮಾಡಿ ಸರ್ಕಾರವನ್ನು ಸುಭದ್ರಗೊಳಿಸಬೇಕೆಂದು ಸಿಎಂ ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ ಎನ್ನಲಾಗಿದೆ.
ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವುದು, ಅಭಿವೃದ್ಧಿ ಕಾರ್ಯಗಳ ವೇಗ ಹೆಚ್ಚಿಸುವುದು, ಬಜೆಟ್ನಲ್ಲಿ ಘೋಷಣೆ ಮಾಡಿರುವ ಕಾರ್ಯಕ್ರಮಗಳಿಗೆ ನಿಗದಿತ ಸಮಯದಲ್ಲಿ ಹಣಕಾಸು ಬಿಡುಗಡೆ ಮಾಡುವುದು, ಶಾಸಕರುಗಳು ಕೇಳುವ ಅಭಿವೃದ್ಧಿ ಕೆಲಸಗಳನ್ನು ಮಾಡುವುದು, ಆ ಮೂಲಕ ಶಾಸಕರ ಅಸಮಾಧಾನವನ್ನು ಪರಿಹರಿಸಲು ಸಿಎಂ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಪ್ರಸಕ್ತ ಲೋಕಸಭೆ ಚುನಾವಣೆ, ಪ್ರಚಲಿತ ವಿದ್ಯಮಾನಗಳ ಬಗ್ಗೆ ನಾಳಿನ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿರುವ ವಿಚಾರದ ಬಗ್ಗೆಯೂ ಗಂಭೀರ ಚರ್ಚೆ ನಡೆಸಲಾಗುತ್ತದೆ.
ಮತ್ತೆ ಆಪರೇಷನ್ ಕಮಲದ ಪ್ರಯತ್ನ ನಡೆಸುವ ಸಾಧ್ಯತೆಗಳ ಕುರಿತು ಶಾಸಕರೊಂದಿಗೆ ಮುಖ್ಯಮಂತ್ರಿ ಸಮಾಲೋಚನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.