ಬೆಂಗಳೂರು: ಕೆಲ ದಿನಗಳಲ್ಲಿಯೇ ಸರ್ಕಾರ ರಚಿಸಲಿರುವ ಬಿಜೆಪಿಗೆ ಬಾಹ್ಯ ಬೆಂಬಲ ನೀಡಬೇಕೆಂದು ಪಕ್ಷದ ಕೆಲ ಶಾಸಕರು ಒತ್ತಾಯ ಮಾಡುತ್ತಿದ್ದು, ಹೆಚ್.ಡಿ. ಕುಮಾರಸ್ವಾಮಿ ಅವರು ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಜಿ.ಟಿ. ದೇವೇಗೌಡ ಹೇಳಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಜೆಡಿಎಸ್ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ನಾಯಕರು ಎಲ್ಲಾ ಶಾಸಕರ ಜತೆ ಸಭೆ ನಡೆಸಿದರು. ಕೆಲ ಶಾಸಕರು ಬಿಜೆಪಿಗೆ ಬಾಹ್ಯ ಬೆಂಬಲ ಕೊಡುವ ಬಗ್ಗೆ ಒತ್ತಾಯ ಮಾಡಿದ್ದಾರೆ ಎಂದು ಹೇಳಿದರು.
ಇನ್ನೂ ಕೆಲ ಶಾಸಕರು ಪ್ರತಿಪಕ್ಷ ಸ್ಥಾನದಲ್ಲಿ ಕುಳಿತುಕೊಳ್ಳುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. ಪಕ್ಷ ಸಂಘಟನೆ ಬಗ್ಗೆಯೂ ಚರ್ಚೆ ನಡೆಯಿತು. ಬಿಜೆಪಿಗೆ ಬಾಹ್ಯ ಬೆಂಬಲ ನೀಡುವ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ಅವರೇ ಅಂತಿಮ ನಿರ್ಧಾರ ಮಾಡಲಿದ್ದಾರೆ. ನಾವು ಪ್ರತಿಪಕ್ಷ ಸ್ಥಾನದಲ್ಲಿ ಕುಳಿತುಕೊಳ್ಳಬೇಕಾ ಅಥವಾ ಬಿಜೆಪಿಗೆ ಬೆಂಬಲ ನೀಡಬೇಕಾ ಎಂಬ ನಿರ್ಧಾರ ಕುಮಾರಸ್ವಾಮಿ ಅವರಿಗೆ ಬಿಟ್ಟದ್ದು ಎಂದರು.
ಸೋಮವಾರ ಸದನದಲ್ಲಿ ಬಿಜೆಪಿಗೆ ಬೆಂಬಲ ಕೊಡ್ತೀರಾ ಎಂಬ ಪ್ರಶ್ನೆಗೆ ಹಾರಿಕೆಯ ಉತ್ತರ ನೀಡಿದ ಜಿ.ಟಿ ದೇವೇಗೌಡ, ನನಗೆ ಗೊತ್ತಿಲ್ಲ, ಕುಮಾರಸ್ವಾಮಿ ಅವರನ್ನೇ ಕೇಳಿ ಎಂದು ಹೇಳಿ ಹೊರಟರು.