ಬೆಂಗಳೂರು: ಎಲ್ಲರೂ ಒಟ್ಟಿಗೆ ಸೇರಿ ಪಕ್ಷಕ್ಕೆ ಹೊಸ ಚೈತನ್ಯ ತುಂಬಬೇಕಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಮನವಿ ಮಾಡಿದ್ದಾರೆ. ಮೈತ್ರಿ ಸರ್ಕಾರದ ಅವಧಿಯಲ್ಲಿ ಉಂಟಾದ ಕಹಿ ಘಟನೆಗಳು ಹಾಗೂ ಕಳೆದ ಲೋಕಸಭೆ ಹಾಗೂ ವಿಧಾನಸಭೆ ಉಪ ಚುನಾವಣೆಯಲ್ಲಿ ಪಕ್ಷಕ್ಕೆ ಆದ ಹಿನ್ನಡೆಯನ್ನು ಮರೆತು ಪಕ್ಷ ಬೆಳೆಸಲು ಕೋರಿದ್ದಾರೆ.
ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಪಕ್ಷವನ್ನು ಬಲಗೊಳಿಸುವ ಉದ್ದೇಶದಿಂದ ನಾಳೆ ಅರಮನೆ ಮೈದಾನದಲ್ಲಿ ಜೆಡಿಎಸ್ ಸಮಾವೇಶ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಬೇಕೆಂದು ಕೋರಿದ್ದಾರೆ. ಜೆಡಿಎಸ್ ಪಕ್ಷ ಸಂದಿಗ್ಧ ಪರಿಸ್ಥಿತಿಯಲ್ಲಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸಬೇಕಿದೆ. ಅದಕ್ಕಾಗಿ ಎಲ್ಲರೂ ಒಗ್ಗೂಡಿ ಕೆಲಸ ಮಾಡುವಂತೆ ಮನವಿ ಮಾಡಿದ್ದಾರೆ.
ಪಕ್ಷದ ಕಾರ್ಯಕರ್ತರೇ ಆಸ್ತಿ. ಜೆಡಿಎಸ್ ಪಕ್ಷವನ್ನು ಕಟ್ಟುತ್ತೇವೆಂಬ ಪಣ ತೊಟ್ಟಿರುವ ಮುಖಂಡರು ಹಾಗೂ ಕಾರ್ಯಕರ್ತರನ್ನು ಸೇರಿಸಿ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಪಕ್ಷ ಸಂಘಟನೆ ಹಾಗೂ ಬಲಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಹೋರಾಟ ಹಾಗೂ ಪಕ್ಷದ ರೂಪುರೇಷ ತಯಾರಿಸುವ ಉದ್ದೇಶದಿಂದ ನಡೆಸುತ್ತಿರುವ ಸಮಾವೇಶಕ್ಕೆ, ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಬೇಕೆಂದು ಮನವಿ ಮಾಡಿದ್ದಾರೆ.
ಅರಮನೆ ಮೈದಾನದಲ್ಲಿ ನಾಳೆ ಬೆಳಗ್ಗೆ 11ಗಂಟೆಗೆ ನಡೆಯಲಿರುವ ಜೆಡಿಎಸ್ ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಸೇರಿ ಪಕ್ಷದ ಎಲ್ಲಾ ನಾಯಕರು, ಮುಖಂಡರು ಪಾಲ್ಗೊಳ್ಳಲಿದ್ದಾರೆ. ಇದು ಈ ವರ್ಷದ ಮೊದಲ ಸಮಾವೇಶ. ತಳ ಮಟ್ಟದಿಂದ ಪಕ್ಷ ಸಂಘಟನೆ ಮಾಡುವುದು ಹಾಗೂ ಮುಂಬರುವ ನಗರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಉದ್ದೇಶದಿಂದ ಸಮಾವೇಶ ನಡೆಸಲಾಗುತ್ತಿದೆ.