ಬೆಂಗಳೂರು : ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆಯನ್ನು ಇಂದೇ ಅಂತಿಮಗೊಳಿಸುವ ಸಾಧ್ಯತೆ ಇದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಸೇರಿದಂತೆ ಹಲವಾರು ಮುಖಂಡರನ್ನೊಳಗೊಂಡ ರಾಜ್ಯ ಸಂಸದೀಯ ಮಂಡಳಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ.
ಸಭೆಯಲ್ಲಿ ಮಾಜಿ ಸಚಿವ ಬಂಡೆಪ್ಪ ಕಾಶಂಪೂರ, ಶಾಸಕರಾದ ಸುರೇಶ್ ಗೌಡ, ಕೃಷ್ಣಾರೆಡ್ಡಿ, ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ, ವಿಧಾನಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್, ಟಿ.ಎ. ಶರವಣ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲೀಲಾದೇವಿ ಆರ್ ಪ್ರಸಾದ್, ನಬಿ, ಬಿ.ಬಿ.ನಿಂಗಯ್ಯ, ಕೋನರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ಬಹುತೇಕ ಶಾಸಕರು ಗೈರು: ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ, ಸಾ.ರಾ.ಮಹೇಶ್, ಎಸ್.ಆರ್.ಶ್ರೀನಿವಾಸ್, ಪಿ.ಜಿ.ಆರ್.ಸಿಂಧ್ಯಾ, ಮಾಜಿ ಶಾಸಕ ವೈ.ಎಸ್.ವಿ.ದತ್ತ ಮತ್ತಿತರ ಮುಖಂಡರು ಸಭೆಗೆ ಗೈರಾಗಿದ್ದರು. ಈಗಾಗಲೇ ಪಕ್ಷದ ನಾಯಕರು ವಿಧಾನಸಭಾ ಕ್ಷೇತ್ರವಾರು ಮುಖಂಡರ ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಸ್ಥಳೀಯರಿಂದ ಮಾಹಿತಿ ಪಡೆದಿದ್ದಾರೆ.
ಕಾಂಗ್ರೆಸ್ ಪಕ್ಷದೊಂದಿಗೆ ಲೋಕಸಭೆ ಚುನಾವಣೆಯಲ್ಲಿ ಮಾಡಿಕೊಂಡಿದ್ದ ಮೈತ್ರಿಯನ್ನು ಈ ಉಪಚುನಾವಣೆಯಲ್ಲಿ ಮುಂದುವರೆಸುವುದಿಲ್ಲ ಎಂದು ಈಗಾಗಲೇ ಜೆಡಿಎಸ್ ನಾಯಕರು ಸ್ಪಷ್ಟಪಡಿಸಿರುವುದರಿಂದ 15 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಆಯಾ ಕ್ಷೇತ್ರಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡುವ ಕುರಿತು ಸಭೆಯಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿವೆ. ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿಲ್ಲದೇ, ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಾಗಿದ್ದು, ಎರಡಕ್ಕಿಂತ ಹೆಚ್ಚು ಮಂದಿ ಆಕಾಂಕ್ಷಿಗಳಿರುವ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆಯನ್ನು ಅಂತಿಮಗೊಳಿಸುವ ಸಂಬಂಧ ಸಂಸದೀಯ ಮಂಡಳಿ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.
ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಕಳೆದ ಮೂರು ತಿಂಗಳಿನಿಂದಲೂ ಜಿಲ್ಲಾವಾರು ಹಾಗೂ ವಿವಿಧ ಘಟಕಗಳ ಸಭೆ ನಡೆಸಿ ಚುನಾವಣೆ ಪೂರ್ವ ಸಿದ್ದತೆಯನ್ನು ನಡೆಸಿದ್ದರು. ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ್ದು, ಗೆಲ್ಲುವ ಅಭ್ಯರ್ಥಿಗಳಿಗೆ ಮಣೆ ಹಾಕಲಾಗುತ್ತದೆ. ಹುಣಸೂರು, ಕೆ.ಆರ್.ಪೇಟೆ, ಯಶವಂತಪುರ, ಮಹಾಲಕ್ಷ್ಮಿಲೇಔಟ್, ಶಿವಾಜಿನಗರ, ಕೆ.ಆರ್.ಪುರ, ಹೊಸಕೋಟೆ, ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿದುಬಂದಿದೆ.
ಉಳಿದ ಕ್ಷೇತ್ರಗಳಾದ ಗೋಕಾಕ್, ಅಥಣಿ, ಹಿರೇಕೆರೂರು, ರಾಣೆಬೆನ್ನೂರು, ಕಾಗವಾಡ, ವಿಜಯನಗರ, ಯಲ್ಲಾಪುರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಕಾಂಗ್ರೆಸ್-ಬಿಜೆಪಿ ವಿರುದ್ದ ಹೋರಾಟ ನಡೆಸಲು ನಿರ್ಧರಿಸಲಾಗಿದೆ.