ಬೆಂಗಳೂರು : ವಿಧಾನಸಭಾ ಕ್ಷೇತ್ರಗಳ ಎರಡು ಉಪಚುನಾವಣೆ ನಡುವೆಯೇ ವಿಧಾನ ಪರಿಷತ್ನ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಗಳ ಚುನಾವಣೆ ಬಂದಿದೆ. ಜೆಡಿಎಸ್ ಕೂಡ ಇದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಈ ಸಂಬಂಧ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸಂಜೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ನೇತ್ರತ್ವದಲ್ಲಿ ಸಭೆ ಆರಂಭವಾಗಿದೆ. ಚುನಾವಣೆ ನಡೆಯುವ ಕ್ಷೇತ್ರದ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಆಯಾ ಕ್ಷೇತ್ರಗಳ ಮುಖಂಡರೊಂದಿಗೆ ಗೌಡರು ಸಮಾಲೋಚಿಸುತ್ತಿದ್ದಾರೆ.
ವಿಧಾನಪರಿಷತ್ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣಾ ಸಿದ್ಧತೆಗೆ ಸಂಬಂಧಿಸಿದಂತೆ ಸಭೆ ಕರೆದಿದ್ದು, ಅಭ್ಯರ್ಥಿಗಳು ಹಾಗೂ ಆಯಾ ಕ್ಷೇತ್ರಗಳ ಮುಖಂಡರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.
ಶಾಸಕರು ಸೇರಿ ಪ್ರತಿಯೊಬ್ಬರ ಅಭಿಪ್ರಾಯ ಪಡೆದುಕೊಳ್ಳುತ್ತಿರುವ ದೇವೇಗೌಡರು, ಯಾವ ರೀತಿ ಚುನಾವಣಾ ತಯಾರಿ ಮಾಡಿಕೊಳ್ಳಬೇಕೆಂಬುದರ ಬಗ್ಗೆ ಸಲಹೆ, ಸೂಚನೆಗಳನ್ನು ನೀಡುತ್ತಿದ್ದಾರೆ.
ಸಭೆಯಲ್ಲಿ ವಿಧಾನ ಪರಿಷತ್ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ, ಸದಸ್ಯ ತಿಪ್ಪೇಸ್ವಾಮಿ, ಮಾಜಿ ಸದಸ್ಯ ಟಿ ಎ ಸರವಣ, ಶಾಸಕರಾದ ಶ್ರೀನಿವಾಸಗೌಡ, ಜಿಲ್ಲಾಧ್ಯಕ್ಷರು ಮತ್ತಿತರ ಮುಖಂಡರು ಭಾಗವಹಿಸಿದ್ದಾರೆ.
ಅದೇ ರೀತಿ ಶಿಕ್ಷಕರ ಕ್ಷೇತ್ರಕ್ಕೆ ಸ್ಪರ್ಧಿಸಿರುವ ಎ ಪಿ ರಂಗನಾಥ್, ಆಗ್ನೇಯ ಪದವೀಧರ ಕ್ಷೇತ್ರದ ಆರ್ ಚೌಡರೆಡ್ಡಿ ತೂಪಲ್ಲಿ, ಪಶ್ಚಿಮ ಪದವೀಧರ ಕ್ಷೇತ್ರದ ಶಿವಶಂಕರ ಕಲ್ಲೂರ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಸ್ಪರ್ಧಿಸಿರುವ ತಿಮ್ಮಯ್ಯ ಎಸ್ ಪುರ್ಲೆ ಅವರು ಸಭೆಯಲ್ಲಿ ಹಾಜರಿದ್ದರು.