ಬೆಂಗಳೂರು: ಸಚಿವಸಂಪುಟ ರಚನೆ ಮಾಡಲು 3 ವಾರ, ಖಾತೆ ಹಂಚಲು 1 ವಾರ ಮತ್ತು ಜಿಲ್ಲಾ ಉಸ್ತುವಾರಿ ಹಂಚಿಕೆಗೆ 2 ವಾರ ಕಾಲಾವಕಾಶ ತೆಗೆದುಕೊಂಡಿರುವ ರಾಜ್ಯ ಬಿಜೆಪಿ ಸರ್ಕಾರ, ಕೇಂದ್ರ ಸರ್ಕಾರದಿಂದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಹಣ ಪಡೆಯುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಟೀಕಿಸಿದ್ದಾರೆ.
ಈಟಿವಿ ಭಾರತನೊಂದಿಗೆ ಮಾತನಾಡಿರುವ ಅವರು, ಕೇಂದ್ರದ ಹಂಗಿನಲ್ಲಿ ರಾಜ್ಯ ಸರ್ಕಾರ ನಡೆಸುವಂತಾಗಿದೆ ಎಂದು ಟೀಕಿಸಿದರು. ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಏಳು ವಾರ ಕಳೆದರೂ ಕೇಂದ್ರ ಸರ್ಕಾರದಿಂದ ಯಾವುದೇ ಪರಿಹಾರ ಹಣ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರ 30 ಸಾವಿರ ಕೋಟಿಗೂ ಹೆಚ್ಚು ನಷ್ಟವಾದ ಕುರಿತು ವರದಿಯನ್ನು ಈಗ ಕೇಂದ್ರಕ್ಕೆ ಸಲ್ಲಿಸಿದೆ. ನೆರೆ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಹಾಗೂ ಪುನರ್ವಸತಿ ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.
ಆರಂಭದಲ್ಲಿ ಜಿಲ್ಲಾಧಿಕಾರಿಗಳ ಖಾತೆಯಿಂದ ಪ್ರತಿ ಕುಟುಂಬಕ್ಕೆ 10 ಸಾವಿರ ನೀಡಿರುವುದನ್ನು ಹೊರತುಪಡಿಸಿದರೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಯಾವುದೇ ಹಣ ಬಿಡುಗಡೆಯಾಗಿಲ್ಲ ಎಂದು ಹೆಚ್ ಕೆ ಕುಮಾರಸ್ವಾಮಿ ಹೇಳಿದ್ರು.
ಹೋರಾಟದ ಎಚ್ಚರಿಕೆ: ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಪರಿಸ್ಥಿತಿ ಎದುರಿಸುವಲ್ಲಿ ಮತ್ತು ಕೇಂದ್ರದಿಂದ ಅನುದಾನ ತರುವುದರಲ್ಲಿ ರಾಜ್ಯ ಸರ್ಕಾರ ವಿಳಂಬ ಧೋರಣೆಯನ್ನು ಮುಂದುವರಿಸಿದರೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಹೋರಾಟ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷರು ಎಚ್ಚರಿಕೆ ರವಾನಿಸಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ಹಾಹಾಕಾರ ಉಂಟಾಗಿದೆ. ನೆರೆ ಹಾವಳಿಗೆ ತುತ್ತಾಗಿರುವ ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಒದಗಿಸಬೇಕು. ಕಳೆದ ವರ್ಷ ಕೊಡಗಿನಲ್ಲಿ ಅತಿವೃಷ್ಟಿಯಿಂದಾಗಿ ಭೂಕುಸಿತ, ಪ್ರವಾಹ ಉಂಟಾಗಿತ್ತು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ 800 ಮನೆ ನಿರ್ಮಾಣಕ್ಕೆ ಕ್ರಮ ಕೈಗೊಂಡಿತ್ತು. ಆದರೆ ಈಗಿನ ಸರ್ಕಾರ ಪ್ರವಾಹಪೀಡಿತ ಪ್ರದೇಶಗಳಲ್ಲಿ ಮನೆ ನಿರ್ಮಾಣಕ್ಕೆ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ವರ್ಗಾವಣೆ ದಂಧೆ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ. ಕೆಳಮಟ್ಟದಿಂದ ಹಿಡಿದು ಹಿರಿಯ ಅಧಿಕಾರಿಗಳವರೆಗೂ ವರ್ಗಾವಣೆಯಾಗುತ್ತಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದ ಕಾಮಗಾರಿಗಳನ್ನು ರದ್ದುಗೊಳಿಸಲಾಗಿದೆ. ಮೈತ್ರಿ ಸರ್ಕಾರದ ಬಜೆಟ್ ಅನ್ನು ರಾಮನಗರ, ಮಂಡ್ಯ ಬಜೆಟ್ ಎಂದು ಬಿಜೆಪಿಯವರು ಟೀಕಿಸಿದ್ದರು. ಈಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಲ್ಲ ಜಿಲ್ಲೆಗಳನ್ನು ಸಮಾನವಾಗಿ ಪರಿಗಣಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.