ಬೆಂಗಳೂರು : ಮುಂಬರುವ ಜಿಲ್ಲಾ, ತಾಲೂಕು ಪಂಚಾಯತ್ ಹಾಗೂ ಬಿಬಿಎಂಪಿ ಚುನಾವಣೆ ಹಿನ್ನೆಲೆ ಪೂರ್ವ ತಯಾರಿಗೆ ಸಂಬಂಧಿಸಿದಂತೆ ಜುಲೈ 15ರಿಂದ ಜುಲೈ 23ರವರೆಗೆ ಸರಣಿ ಸಭೆಗಳನ್ನು ನಡೆಸಲು ಜೆಡಿಎಸ್ ತೀರ್ಮಾನಿಸಿದೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಾಳೆಯಿಂದ ಜುಲೈ 23ರವರೆಗೆ ನಡೆಯಲಿರುವ ಸಭೆಗೆ ಜಿಲ್ಲಾವಾರು ಪಕ್ಷದ ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು, ಹಾಲಿ ಹಾಗೂ ಮಾಜಿ ರಾಜ್ಯಸಭಾ ಸದಸ್ಯರು, ಲೋಕಸಭಾ ಸದಸ್ಯರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ತು ಸದಸ್ಯರುಗಳು, ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ವಿಧಾನಸಭೆ ಉಪ ಚುನಾವಣೆ ಹಾಗೂ ವಿಧಾನ ಪರಿಷತ್ತಿನ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ವಿವಿಧ ವಿಭಾಗಗಳ ಅಧ್ಯಕ್ಷರುಗಳನ್ನು ಆಹ್ವಾನಿಸಲಾಗಿದೆ.
ಈ ತುರ್ತು ಸಭೆಯಲ್ಲಿ ಮುಂಬರುವ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳ ಬಗ್ಗೆ ಚರ್ಚಿಸಲಾಗುವುದು. ಸಿದ್ಧತೆ ಒಳಗೊಂಡಂತೆ ಇತರೆ ವಿಷಯಗಳ ಕುರಿತು ಜೆಡಿಎಸ್ನ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿರವರು ಮಾರ್ಗದರ್ಶನ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿದೆ.
ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ : ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಹಿನ್ನೆಲೆ ಆಸಕ್ತ ಅಭ್ಯರ್ಥಿಗಳಿಂದ ಜೆಡಿಎಸ್ ಅರ್ಜಿ ಆಹ್ವಾನಿಸಿದೆ. ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಯಲಹಂಕ, ಆನೇಕಲ್ ತಾಲೂಕು ಪಂಚಾಯತ್ ಕ್ಷೇತ್ರಗಳಿಗೆ ಜೆಡಿಎಸ್ ವತಿಯಿಂದ ಸ್ಪರ್ಧಿಸುವ ಆಕಾಂಕ್ಷಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಬೆಂಗಳೂರು ನಗರ ಜಿಲ್ಲೆಯ 25 ಜಿಪಂ ಹಾಗೂ 69 ತಾಲೂಕು ಪಂಚಾಯತ್ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಮ್ಮ ಪಕ್ಷದಿಂದ ಸ್ಪರ್ಧಿಸುವ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜೆಡಿಎಸ್ನ ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಮೀಸಲಾತಿಗೆ ಅನುಗುಣವಾಗಿ ಉಮೇದುವಾರಿಕೆ ಅರ್ಜಿಯನ್ನು ಪಡೆದು ಭರ್ತಿ ಮಾಡುವಾಗ, ಪಕ್ಷಕ್ಕೆ ಸಲ್ಲಿಸಿರುವ ಸೇವೆ, ಸಾಮಾಜಿಕ ಸೇವೆಯ ವಿವರಗಳನ್ನು ಒಳಗೊಂಡ ವೈಯಕ್ತಿಕ ಪರಿಚಯ ಹಾಗೂ ನಿಗದಿತ ಠೇವಣಿಯೊಂದಿಗೆ ಪಕ್ಷದ ನಗರ ಕಚೇರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಎಲ್ಲಾ ಜಿಲ್ಲೆಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಸಿದ್ಧತೆ ಪೂರ್ಣ: ಸಚಿವ ಸುರೇಶ್ ಕುಮಾರ್