ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಡಿಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್ ನಗರದಲ್ಲಿ ನಾಳೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಫ್ರೀಡಂಪಾರ್ಕ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಬೆಲೆ ಏರಿಕೆ ಖಂಡಿಸಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ವಿಧಾನಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ರಮೇಶ್ ಗೌಡ, ಶಾಸಕ ಮಂಜುನಾಥ್, ವಿಧಾನಪರಿಷತ್‌ನ ಮಾಜಿ ಸದಸ್ಯ ಟಿ.ಎ.ಶರವಣ ಸೇರಿದಂತೆ ಇತರರು ಭಾಗಿಯಾಗಲಿದ್ದಾರೆ. ಕೋವಿಡ್‌ನಿಂದಾಗಿ ಜನತೆ ಸಂಕಷ್ಟಕ್ಕೊಳಗಾಗಿರುವ ವೇಳೆಯಲ್ಲಿಯೇ ಬಿಜೆಪಿ ಸರ್ಕಾರವು ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿ ಹೊರೆ ಹೊರಿಸಿದೆ ಎಂದು ಜೆಡಿಎಸ್ ಆರೋಪಿಸಿದೆ.