ಬೆಂಗಳೂರು: ರಾಜಧಾನಿಯಲ್ಲಿ ಉಭಯ ಪಕ್ಷಗಳ ಶಕ್ತಿ ಪ್ರದರ್ಶನದ ನಂತರ ಇದೀಗ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಜಂಟಿ ಪ್ರಚಾರ ಮುಂದುವರೆಸಿದ್ದಾರೆ. ಇಂದು ಬೀದರ್ನಲ್ಲಿ ಇಬ್ಬರೂ ನಾಯಕರು ಜೊತೆಯಾಗಿದ್ದರು.
ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರ ಜೊತೆ ಮೆರವಣಿಗೆ ಮೂಲಕ ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಇಂದು ನಾಮಪತ್ರ ಸಲ್ಲಿಸಿದರು. ಈ ವೇಳೆ ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹಾಜರಿದ್ದರು.
ಬೀದರ್ನ ನ್ಯಾಷನಲ್ ಕಾಲೇಜ್ ಆವರಣದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಏರ್ಪಡಿಸಲಾಗಿತ್ತು. ಈಶ್ವರ್ ಖಂಡ್ರೆ ಉಮೇದುವಾರಿಕೆ ಸಲ್ಲಿಸಿದ ಬಳಿಕ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಜಂಟಿ ಸಮಾವೇಶದಲ್ಲಿ ಪಾಲ್ಗೊಂಡರು.
ಇದೇ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ರಾಜಶೇಖರ್ ಪಾಟೀಲ್, ರಹೀಂ ಖಾನ್ ಮತ್ತು ಬಂಡೆಪ್ಪ ಕಾಶೆಂಪೂರ್ ಕೂಡಾ ಸಾಥ್ ನೀಡಿದರು.