ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ತಮ್ಮ ವಿರುದ್ಧ ಹೂಡಿರುವ ಕ್ರಿಮಿನಲ್ ಮಾನನಷ್ಟ ಖಾಸಗಿ ದೂರನ್ನು ರದ್ದು ಪಡಿಸುವಂತೆ ಕೋರಿ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಸಲ್ಲಿಸಿರುವ ಅರ್ಜಿ ವಿಚಾರಣೆಯಿಂದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಹಿಂದೆ ಸರಿದಿದ್ದಾರೆ. ಡಿ.ರೂಪಾ ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ವಿಚಾರಣೆಯು ಸೋಮವಾರ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ವಿಚಾರಣೆ ವೇಳೆ ಪ್ರಕರಣದ ಬಗ್ಗೆ ಮಾಹಿತಿ ಪಡೆದ ನ್ಯಾಯಮೂರ್ತಿಗಳು, ಈ ಹಿಂದೆ ತಾವು ವಕೀಲರಾಗಿದ್ದ ಸಂದರ್ಭದಲ್ಲಿ ಬೇರೊಂದು ಪ್ರಕರಣ ಸಂಬಂಧ ರೋಹಿಣಿ ಸಿಂಧೂರಿ ಅವರ ಪರ ವಕಾಲತ್ತು ವಹಿಸಲಾಗಿತ್ತು. ಆದ್ದರಿಂದ ತಾವು ಈ ಅರ್ಜಿ ವಿಚಾರಣೆ ನಡೆಸುವುದು ಉತ್ತಮವಲ್ಲ. ಹಾಗಾಗಿ ಅರ್ಜಿಯನ್ನು ಬೇರೊಂದು ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸುವ ಸಂಬಂಧ ಸೂಕ್ತ ಆದೇಶ ಪ್ರಕಟಿಸಬೇಕು. ಹೀಗಾಗಿ ಪ್ರಕರಣದ ಕಡತವನ್ನು ಮುಖ್ಯ ನ್ಯಾಯಮೂರ್ತಿ ಅವರ ಮುಂದಿಡಬೇಕು ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಸೂಚನೆ ನೀಡಿ ವಿಚಾರಣೆ ಮುಂದೂಡಿದ್ದಾರೆ.
ಪ್ರಕರಣದ ಹಿನ್ನೆಲೆ ಏನು?: ಐಪಿಎಸ್ ಡಿ.ರೂಪಾ ಮೌದ್ಗಿಲ್ ಅವರು 2023ರ ಫೆ.18 ಮತ್ತು 19ರಂದು ತಮ್ಮ ಫೇಸ್ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ಜತೆಗೆ, ನನ್ನ ತೇಜೋವಧೆ ಮಾಡುವ ದುರದ್ದೇಶದಿಂದಲೇ ರೂಪ ಈ ಕೃತ್ಯ ಎಸಗಿದೆ. ಅದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದೆ. ಅಲ್ಲದೆ, ಮಾನಸಿಕ ಹಿಂಸೆ ಅನುಭವಿಸಿದ್ದೇನೆ ಎಂದು ಆರೋಪಿಸಿ ರೋಹಿಣಿ ಸಿಂಧೂರಿ ಮಾ.3ರಂದು ಅಧೀನ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಅಲ್ಲದೆ, ಮಾನಹಾನಿ ಮಾಡಿ ಮಾನಸಿಕ ಯಾತನೆ ಉಂಟು ಮಾಡಿರುವುದಕ್ಕಾಗಿ ಡಿ ರೂಪಾ ಅವರಿಂದ ಒಂದು ಕೋಟಿ ರೂಪಾಯಿಯನ್ನು ಪರಿಹಾರವಾಗಿ ಕೊಡಿಸಿಕೊಡಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದರು. ಅದನ್ನು ಪರಿಗಣಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರೂಪಾ ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಲು ಆದೇಶಿಸಿತ್ತು. ಈ ಆದೇಶ ಮತ್ತು ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ರೂಪಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸಿಂಧೂರಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ನಿರ್ಬಂಧಿಸಿದ್ದ ಕೋರ್ಟ್: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಯಾವುದೇ ರೀತಿಯ ಮಾನಹಾನಿಕರ ಹೇಳಿಕೆಗಳನ್ನು ಮಾಧ್ಯಮಗಳು ಹಾಗೂ 60ನೇ ಪ್ರತಿವಾದಿಯಾಗಿರುವ ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ಅವರಿಗೆ ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿ ಫೆಬ್ರವರಿಯಲ್ಲಿ ಆದೇಶಿಸಿತ್ತು.
ಇದನ್ನೂ ಓದಿ:ರೋಹಿಣಿ ಸಿಂಧೂರಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆ