ಬೆಂಗಳೂರು: ರಾಜ್ಯದಲ್ಲಿ ಸ್ಮಶಾನಕ್ಕೆ ಜಾಗವಿಲ್ಲದ ಕಡೆಗಳಲ್ಲಿ ಅಗತ್ಯ ಪ್ರಮಾಣದ ಭೂಮಿಯನ್ನು ಮಂಜೂರು ಮಾಡುವಂತೆ ನ್ಯಾಯಾಲಯ ಆದೇಶಿಸಿದ ನಂತರವೂ ಕಾರ್ಯ ಪ್ರವೃತ್ತವಾಗದ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ.
ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಈ ಕುರಿತು ಬೆಂಗಳೂರು ನಿವಾಸಿ ಮಹಮ್ಮದ್ ಇಕ್ಬಾಲ್ ಎಂಬುವವರು ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಅರವಿಂದ ಕುಮಾರ್ ನೇತೃತ್ವದ ವಿಭಾಗೀಯ ಪೀಠ, ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಪ್ರಕರಣದ ಹಿನ್ನೆಲೆ : ರಾಜ್ಯದಲ್ಲಿ ಶವ ಸಂಸ್ಕಾರಕ್ಕೆ ಜಾಗವಿಲ್ಲದ ಸುಮಾರು 6 ಸಾವಿರಕ್ಕೂ ಹೆಚ್ಚು ಕಂದಾಯ ಗ್ರಾಮಗಳು, ಜನವಸತಿ ಪ್ರದೇಶಗಳು ಹಾಗೂ 218 ಪಟ್ಟಣ ಪ್ರದೇಶಗಳಲ್ಲಿ ಅಗತ್ಯ ಜಮೀನು ಮಂಜೂರು ಮಾಡುವಂತೆ, ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಮಹಮ್ಮದ್ ಇಕ್ಬಾಲ್ ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠವು 2019ರ ಆಗಸ್ಟ್ 20ರಂದು ಸ್ಮಶಾನ ಜಾಗವಿಲ್ಲದ ಗ್ರಾಮಗಳಿಗೆ ಮತ್ತು ಪಟ್ಟಣಗಳಿಗೆ 6 ತಿಂಗಳ ಒಳಗೆ ಅಗತ್ಯ ಪ್ರಮಾಣದ ಭೂಮಿಯನ್ನು ಮಂಜೂರು ಮಾಡುವಂತೆ ಆದೇಶಿಸಲಾಗಿತ್ತು. ಆದರೆ, ಗಡುವು ಮುಗಿದರೂ ಸರ್ಕಾರ ಯಾವುದೇ ಕ್ರಮ ಜರುಗಿಸಿಲ್ಲ. ಹೀಗಾಗಿ, ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮ ಜರುಗಿಸಬೇಕು ಮತ್ತು ಹಿಂದಿನ ಆದೇಶ ಪಾಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.