ಬೆಂಗಳೂರು: ಜುಲೈ 2 ಮತ್ತು 3 ರಂದು ಹೈದರಾಬಾದ್ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಲಂಡನ್ ಪ್ರವಾಸದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆಗೆ ಗೈರಾಗಲಿದ್ದಾರೆ.
ನೆರೆ ರಾಜ್ಯ ತೆಲಂಗಾಣ ರಾಜಧಾನಿಯಲ್ಲಿ ಈ ಬಾರಿಯ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಜುಲೈ 2 ರಿಂದ ಎರಡು ದಿನಗಳ ಕಾಲ ನಡೆಯಲಿದೆ. ಸಭೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ. ಅರುಣಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂಗಳಾದ ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಡಾ. ಅಶ್ವಥ್ ನಾರಾಯಣ, ಪುದುಚೇರಿ ರಾಜ್ಯ ಉಸ್ತುವಾರಿ ಮತ್ತು ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಮತ್ತು ಯುವ ಮೋರ್ಛಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಭಾಗಿಯಾಗಲಿದ್ದಾರೆ.
ಸದ್ಯ ಲಂಡನ್ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹತ್ತು ದಿನಗಳ ಪ್ರವಾಸವನ್ನು ಮತ್ತೆ 8 ದಿನ ವಿಸ್ತರಣೆ ಮಾಡಿಕೊಂಡಿದ್ದು, ಜುಲೈ 8 ರಂದು ವಾಪಸ್ ಆಗಲಿದ್ದಾರೆ ಹಾಗಾಗಿ ಈ ಬಾರಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಯಡಿಯೂರಪ್ಪ ಗೈರಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಹೈಕೋರ್ಟ್‌ನ ಹಂಗಾಮಿ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ನೇಮಕ