ನವದೆಹಲಿ, ಬೆಂಗಳೂರು: ಜುಲೈ 2 ರಂದು ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರು ನಿವೃತ್ತರಾಗಲಿರುವ ಹಿನ್ನೆಲೆ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನು ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ನೇಮಿಸಲಾಗಿದೆ.
ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ಅವರನ್ನು ನೇಮಕ ಮಾಡಿರುವ ಕುರಿತು ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ನ್ಯಾಯಮೂರ್ತಿ ಆರಾಧೆ ಅವರು ಕರ್ನಾಟಕ ಹೈಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರಾಗಿದ್ದು, ಜುಲೈ 3ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ: ರಾಜ್ಯಾದ್ಯಂತ ಜುಲೈ 4ರ ವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರು ಜುಲೈ 2ರಂದು ಅಂದರೆ ತಮ್ಮ 62ನೇ ಹುಟ್ಟುಹಬ್ಬದ ಮುನ್ನಾದಿನದಂದು ನಿವೃತ್ತರಾಗಲಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು 65 ವರ್ಷ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ, ಹೈಕೋರ್ಟ್ ನ್ಯಾಯಮೂರ್ತಿಗಳು 62ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ.