ಬೆಂಗಳೂರು: ಕೊರೊನಾ ಲಾಕ್‌ಡೌನ್ ನಡುವೆಯೂ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರೆವೂರು ಗ್ರಾಮದಲ್ಲಿ ರಥೋತ್ಸವ ನಡೆಸಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
ರಥೋತ್ಸವ ನಡೆಸಿದ ಪ್ರಕರಣ ಸಂಬಂಧ ಜಿಲ್ಲಾಡಳಿತ ಮತ್ತು ರಥೋತ್ಸವ ಆಯೋಜಕರ ವಿರುದ್ಧ ಕ್ರಮಕ್ಕೆ ಮನವಿ ಮಾಡಲಾಗಿದೆ. ರಾಷ್ಟ್ರೀಯ ವಿಕೋಪ ನಿರ್ವಹಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲು ಸರ್ಕಾರಕ್ಕೆ ನಿರ್ದೇಶನ ಮತ್ತು ಸೂಕ್ತ ಕಾನೂನು ಕ್ರಮ ಜರುಗಿಸಲು ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಹಾಗೂ ವಕೀಲೆ ಗೀತಾ ಮಿಶ್ರಾ ಕೊರೊನಾ ಸಂಬಂಧ ಈಗಾಗಲೇ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪೂರಕವಾಗಿ ಈ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.
ಕಲಬುರಗಿಯ ರೇವೂರು ಗ್ರಾಮದಲ್ಲಿ ಏ.16ರ ಬೆಳಗ್ಗೆ ರಥೋತ್ಸವ ನಡೆಸಿದ್ದಾರೆ. ಕಾರ್ಯಕ್ರಮದಲ್ಲಿ ಹೊರಗಿನವರು, ಸ್ಥಳೀಯರು ಸೇರಿದಂತೆ ನೂರಾರು ಭಕ್ತರು ಭಾಗವಹಿಸಿದ್ದಾರೆ. ಇದು ಕೋವಿಡ್-19 ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ನಿರ್ದೇಶನಗಳಿಗೆ ವಿರುದ್ಧದ ಆಚರಣೆಯಾಗಿದೆ. ಕೇಂದ್ರ ಸರ್ಕಾರ ಮಾ.24 ಮತ್ತು ಏ.15ರಂದು ಹೊರಡಿಸಿರುವ ಆದೇಶವನ್ನು ಉಲ್ಲಂಘಿಸಿರುವ ಜಿಲ್ಲಾಡಳಿತ ಮತ್ತು ರಥೋತ್ಸವ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಬೇಕು. ಲಾಕ್ ಡೌನ್ ಆದೇಶವನ್ನು ಕಟ್ಟನಿಟ್ಟಾಗಿ ಜಾರಿಗೆ ತರಲು ಸರ್ಕಾರ ಮತ್ತು ಪೊಲೀಸರಿಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.