ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ನ ನಾಲ್ವರು ಚುನಾಯಿತ ಪಾಲಿಕೆ ಸದಸ್ಯರು ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಇಂದು ಪದ್ಮನಾಭನಗರದ ನಿವಾಸದಲ್ಲಿ ಭೇಟಿ ಮಾಡಿ, ಸಮಾಲೋಚನೆ ನಡೆಸಿದ್ದಾರೆ.
ಕಲಬುರಗಿಯಿಂದ ಬೆಂಗಳೂರಿಗೆ ಆಗಮಿಸಿರುವ ಜೆಡಿಎಸ್‌ನ ನೂತನ ಪಾಲಿಕೆ ಸದಸ್ಯರಾದ ಸಾಜಿದ್ ಕಲ್ಯಾಣಿ, ವಿಜಯಲಕ್ಷ್ಮಿ ರೆಡ್ಡಿ, ವಿಶಾಲ ನವರಂಗ, ಅಲಿಮುದ್ದೀನ್ ಪಟೇಲ್ ಅವರು ಗೌಡರ ನಿವಾಸಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗೆದ್ದ ನಾಲ್ವರು ಸದಸ್ಯರನ್ನು ಗೌಡರು ಅಭಿನಂದಿಸಿದರು.
ಕಲಬುರಗಿ ಮಹಾನಗರ ಪಾಲಿಕೆಯ ಅಧಿಕಾರ ಹಿಡಿಯಲು ಕಾಂಗ್ರೆಸ್ ಹಾಗೂ ಬಿಜೆಪಿ ಪೈಪೋಟಿ ನಡೆಸುತ್ತಿದ್ದು, ಎರಡೂ ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಬೆಂಬಲ ಬಯಸುತ್ತಿವೆ. ಯಾವ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಬೇಕೆಂಬುದರ ಬಗ್ಗೆ ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಪಾಲಿಕೆ ಸದಸ್ಯರು ಚರ್ಚೆ ನಡೆಸಿದ್ದಾರೆ.
ಕಾಂಗ್ರೆಸ್ ಅಥವಾ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡರೆ ಉಪಮೇಯರ್ ಸ್ಥಾನ, ಸ್ಥಾಯಿ ಸಮಿತಿಗಳ ಸ್ಥಾನಕ್ಕೆ ಬೇಡಿಕೆಯಿಡುವ ಬಗ್ಗೆಯೂ ವರಿಷ್ಠರ ಜೊತೆ ಚರ್ಚಿಸಲಾಗಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಈಗಾಗಲೇ ಜೆಡಿಎಸ್ ನಾಯಕರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಇನ್ನೂ ಯಾವುದೇ ಅಂತಿಮ ನಿರ್ಧಾರವಾಗಿಲ್ಲ.
ಇದಕ್ಕೂ ಮುನ್ನ ಇಂದು ಬೆಳಗ್ಗೆ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಪಾಲಿಕೆ ಸದಸ್ಯರು ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸಮಾಲೋಚನೆ ನಡೆಸಿದರು.